ತುಳಸಿ ಪೂಜೆ(ಫೋಟೋ-ಶಿಲ್ಪ ಡಿ ಚೆಕ್ಕೆರೆ) 
ಭಕ್ತಿ-ಜ್ಯೋತಿಷ್ಯ

ಇಂದು ಉತ್ಥಾನ ದ್ವಾದಶಿ, ತುಳಸಿ ಪೂಜೆಯ ಮಹತ್ವ, ಪುರಾಣ ಕಥೆ, ಆಚರಣೆ

ಹಿಂದೂ ಸಂಸ್ಕೃತಿಯಲ್ಲಿ ತುಳಸಿ ಗಿಡವನ್ನು ಭಕ್ತಿಯಿಂದ ಪೂಜಿಸುತ್ತಾರೆ. ತುಳಸಿ ಎಂದರೆ ತುಲನ ನಸ್ತಿ ಅಂದರೆ ಗುಣದಲ್ಲಿ ತುಲನೆ ಮಾಡಲು ಸಾಧ್ಯವಾಗದಿರುವ ಗಿಡವೇ ತುಳಸಿ. 

ಲೇಖನ: ಬಿ.ಆರ್. ರಾಧಾಕೃಷ್ಣ ಪ್ರಸಾದ್, ಶ್ರುತಿಕ ಅಪಾರ್ಟ್ ಮೆಂಟ್, ಬೆಂಗಳೂರು

ತುಲಸಿ ಶ್ರೀಸಖಿ ಶುಭೇ ಪಾಪಹಾರಿಣಿ ಪುಣ್ಯದೇ 
ನಮಸ್ತೇ ನಾರದನುತೇ ನಾರಾಯಣ ಮನಪ್ರಿಯೇ  

ಹಿಂದೂ ಸಂಸ್ಕೃತಿಯಲ್ಲಿ ತುಳಸಿ ಗಿಡವನ್ನು ಭಕ್ತಿಯಿಂದ ಪೂಜಿಸುತ್ತಾರೆ. ತುಳಸಿ ಎಂದರೆ ತುಲನ ನಸ್ತಿ ಅಂದರೆ ಗುಣದಲ್ಲಿ ತುಲನೆ ಮಾಡಲು ಸಾಧ್ಯವಾಗದಿರುವ ಗಿಡವೇ ತುಳಸಿ. 

ಚಾಂದ್ರಮಾನ ಕಾರ್ತಿಕಮಾಸದ ಶುಕ್ಲಪಕ್ಷದ 12ನೇ ದಿನ ಅಂದರೆ ದ್ವಾದಶಿಯಂದು ಈ ಹಬ್ಬವನ್ನು ಉತ್ಥಾನ ದ್ವಾದಶಿ ಎಂದು ಆಚರಿಸಲಾಗುತ್ತದೆ. ತುಳಸೀ ವೃಂದಾವನದ ಹತ್ತಿರ ಧಾತ್ರೀ ವೃಕ್ಷದ ಕೊಂಬೆಯನ್ನಿಟ್ಟು ಅದರ ಮುಂದೆ ಶ್ರಿಕೃಷ್ಣನ ಪ್ರತಿಮೆ ಅಥವಾ ಸಾಲಿಗ್ರಾಮಗಳನ್ನಿಟ್ಟು ಪೂಜೆ ಮಾಡುತ್ತಾರೆ. 

ಪೌರಾಣಿಕ ಕಥೆ: ತುಳಸಿ ವಿವಾಹದ ಹಿಂದೆ ದೀರ್ಘವಾದ ಪುರಾಣ ಕಥೆಯಿದೆ. ಹಿಂದೂ ಪುರಾಣದ ಪ್ರಕಾರ ವೃಂದಾ ಎಂಬ ಹೆಸರಿನ ಯುವತಿಯೇ ತುಳಸಿಯಾಗಿ ಗಿಡದ ರೂಪ ಪಡೆದಿರುವುದು. ಈಕೆ ಜಲಂಧರನೆಂಬ ದುಷ್ಟ ರಾಜನನ್ನು ಮದುವೆಯಾಗಿರುತ್ತಾಳೆ.

ಅವಳಿಗೆ ಮಹಾವಿಷ್ಣುವಿನ ಮೇಲೆ ವಿಶೇಷ ಭಕ್ತಿ. ಇದು ಜಲಂಧರನಿಗೆ ಇಷ್ಟವಿರುವುದಿಲ್ಲ. ಆತ ದೇವತೆಗಳಿಗೆ ಉಪಟಳ ನೀಡುತ್ತಿರುತ್ತಾನೆ. ಶಿವನು ಏನು ಮಾಡುವುದೆಂದು ವಿಷ್ಣುವಿನ ಮೊರೆ ಹೋಗುತ್ತಾನೆ. ಆಗ ವಿಷ್ಣುವು ಜಲಂಧರನ ರೂಪ ತಾಳಿ ವೃಂದಾಳ ಬಳಿಗೆ ಬಂದು ಮೋಹಿಸಿ ಆಕೆಯ ಪಾವಿತ್ರ್ಯತೆಗೆ ಧಕ್ಕೆ ತರುತ್ತಾನೆ. ಈ ಸಂದರ್ಭದಲ್ಲಿ ಶಿವನು ಜಲಂಧರ ರಾಜನನ್ನು ಸಂಹರಿಸುತ್ತಾನೆ. ಇತ್ತ ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವ ವಿಷ್ಣುವಿಗೆ ವೃಂದಾ ಕಪ್ಪು ಕಲ್ಲಾಗಿ ಹೋಗು ಎಂದು ಶಾಪ ನೀಡುವಳಲ್ಲದೆ ನಿನಗೆ ಪತ್ನಿಯ ವಿರಹವುಂಟಾಗಲಿ ಎಂದು ಆಶಿಸುತ್ತಾಳೆ. 

ಇದರಿಂದ ರಾಮಾಯಣದಲ್ಲಿ ವಿಷ್ಣುವಿನ ಅವತಾರ ರಾಮನಿಗೆ ಸೀತೆಯು ಕಾಡಿನಲ್ಲಿ ಕೆಲವು ವರ್ಷಗಳ ಕಾಲ ದೂರವಾಗುತ್ತಾಳೆ. ತನ್ನ ಚಾರಿತ್ರ್ಯಕ್ಕೆ ಧಕ್ಕೆಯುಂಟಾದುದರಿಂದ ವೃಂದಾ ಪತಿಯ ಚಿತೆಗೆ ಹಾರಿ ಸಾವಿಗೀಡಾಗುತ್ತಾಳೆ. ವಿಷ್ಣುವು ಆಕೆಯ ಆತ್ಮವನ್ನು ತುಳಸಿ ಗಿಡವಾಗಿ ಪರಿವರ್ತಿಸಿ ಮುಂದಿನ ಜನ್ಮದಲ್ಲಿ ಸಾಲಿಗ್ರಾಮವಾಗಿ ಪ್ರಭೋದಿನಿ ಏಕಾದಶಿಯ ದಿನ ತುಳಸಿಯನ್ನು ಮದುವೆಯಾಗುತ್ತಾನೆ ಎಂಬ ಕಥೆಯಿದೆ. ಇದರ ಸಂಕೇತವೇ ವಿಷ್ಣು-ತುಳಸಿ ವಿವಾಹ. 

ಇನ್ನೊಂದು ಪುರಾಣದ ಪ್ರಕಾರ ದೇವತೆಗಳೂ, ದಾನವರೂ ಕ್ಷೀರಸಾಗರವನ್ನು ಕಡೆದಾಗ ಕೊನೆಯಲ್ಲಿ ಅಮೃತ ಬಂತು. ಅದನ್ನು ಕೈಗೆ ತೆಗೆದುಕೊಂಡ ವಿಷ್ಣುವಿನ ಕಣ್ಣುಗಳಿಂದ ಬಂದ ಆನಂದಬಾಷ್ಪಗಳು ಕಲಶದಲ್ಲಿ ಬಿದ್ದು ಅದರಿಂದ ಒಂದು ಸಣ್ಣ ಗಿಡ ಹುಟ್ಟಿತು. ಅದಕ್ಕೆ ತುಲನೆ ಇಲ್ಲವಾದ್ದರಿಂದ ತುಳಸಿ ಎಂದು ಹೆಸರಿಟ್ಟು ಲಕ್ಷ್ಮಿಯೊಂದಿಗೆ ತುಳಸಿಯನ್ನು ವಿಷ್ಣುವು ಮದುವೆಯಾದನು. ಹಿಂದೂ ಧರ್ಮದಲ್ಲಿ ಮಹಾವಿಷ್ಣುವಿನ ಮಡದಿಯೆಂದೂ ಅವರಿಬ್ಬರಿಗೆ ನಡೆಯುವ ವಿವಾಹವನ್ನು ತುಳಸಿ ವಿವಾಹ ಎಂದು ಕರೆಯುತ್ತಾರೆ.

ಆಚರಣೆ ವಿಧಾನ: ತುಳಸಿ ಕಟ್ಟೆಯನ್ನು ರಂಗೋಲಿ, ಹೂವು, ಮಾವಿನ ಎಲೆಗಳಿಂದ ಅಲಂಕರಿಸಿ ವಿಷ್ಣುವಿನ ಅವತಾರ ಕೃಷ್ಣನ ಮೂರ್ತಿಯನ್ನಿರಿಸಿ ಪೂಜಿಸಲಾಗುತ್ತದೆ. ತುಳಸಿ ಗಿಡದೊಂದಿಗೆ ಬೆಟ್ಟದ ನೆಲ್ಲಿಕಾಯಿ ಗಿಡವನ್ನು ನೆಟ್ಟು ಪೂಜಿಸುವ ರೂಢಿ ಇದೆ. ದೀಪದಿಂದ ಗಿಡದ ಸುತ್ತ ಅಲಂಕರಿಸಲಾಗುತ್ತದೆ. ತುಳಸಿ ಗಿಡದ ಸುತ್ತಲೂ ಮದುವೆ ಮಂಟಪ ನಿರ್ಮಿಸುತ್ತಾರೆ. ಇದಕ್ಕೆ ತುಳಸಿ ಬೃಂದಾವನವೆಂದು ಹೆಸರು. ವೃಂದಾಳ ಆತ್ಮವು ರಾತ್ರಿಯಿಡೀ ಇದ್ದು ಮರುದಿನ ಬೆಳಗ್ಗೆ ಹೊರಟುಹೋಗುತ್ತದೆ ಎಂಬ ನಂಬಿಕೆಯಿದೆ.

ಹೆಂಗಳೆಯರು ತುಳಸಿ ಗಿಡವನ್ನು ಮದುವಣಗಿತ್ತಿಯಂತೆ ಸಿಂಗರಿಸುತ್ತಾರೆ. ವಿಷ್ಣುವಿನ ಅಥವಾ ಅವನ ಅವತಾರವಾದ ಕೃಷ್ಣ, ರಾಮನ ಫೋಟೋವನ್ನು ಇಲ್ಲವೇ ಸಾಲಿಗ್ರಾಮ ಕಲ್ಲನ್ನು ತುಳಸಿ ಗಿಡದ ಪಕ್ಕ ಇಟ್ಟು ಇಬ್ಬರನ್ನೂ ಸ್ನಾನ ಮಾಡಿಸಿ ಶುಭ್ರ ಬಟ್ಟೆ ತೊಡಿಸಿ ಹೂವು, ಹಣ್ಣುಗಳಿಂದ ಅಲಂಕರಿಸುತ್ತಾರೆ. ವಿಷ್ಣುವಿನ ಭಾವಚಿತ್ರ ಹಾಗೂ ತುಳಸಿ ಗಿಡಕ್ಕೆ ಹತ್ತಿಯಿಂದ ತಯಾರಿಸಿದ ಮಾಲೆಯನ್ನು ತೊಡಿಸಿ ಮದುವೆಯ ಶಾಸ್ತ್ರ ಮಾಡಲಾಗುತ್ತದೆ. ಹಿಂದೂ ವಿವಾಹ ಪದ್ಧತಿಯಲ್ಲಿ ನಡೆಯುವ ಆಚರಣೆಯಂತೆಯೇ ವಿಷ್ಣು-ತುಳಸಿ ವಿವಾಹವನ್ನು ಭಕ್ತರು ಆಚರಿಸುತ್ತಾರೆ.

ತುಳಸಿ ಗಿಡ ಉತ್ತಮ ಔಷಧೀಯ ಗುಣವುಳ್ಳದ್ದು. ಮನೆಯ ಸುತ್ತಮುತ್ತ ತುಳಸಿ ಗಿಡ ಬೆಳೆಸಿದರೆ ಸೋಂಕು, ಕ್ರಿಮಿ ಕೀಟಗಳು, ರೋಗ-ರುಜಿನಗಳು ಬರುವ ಸಾಧ್ಯತೆ ಕಡಿಮೆ ಎನ್ನುತ್ತಾರೆ. ಮಳೆಗಾಲ, ಚಳಿಗಾಲದಲ್ಲಿ ತುಳಸಿ ಎಲೆಯನ್ನು ಕಾಳುಮೆಣಸು ಜೊತೆ ಸೇರಿಸಿ ಕಷಾಯ ಮಾಡಿ ಕುಡಿದರೆ ಶೀತ ತಲೆನೋವು, ಜ್ವರ, ಕಫ ಒಂದೆರಡು ದಿನಗಳಲ್ಲಿ ಮಾಯವಾಗಿಬಿಡುತ್ತದೆ. ತುಳಸಿ ಎಲೆ ಅಲರ್ಜಿ ಶಮನಕಾರಿಯೂ ಹೌದು. 

ಯನ್ಮೂಲೇ ಸರ್ವತೀರ್ಥಾನಿ ಯನ್ಮಧ್ಯೇ ಸರ್ವ ದೇವತಾ: |
ಯದಗ್ರೇ ಸರ್ವವೇದಾಶ್ಚ ತುಲಸಿ ತ್ವಾಂ ನಮಾಮ್ಯಹಂ |
ಓಂ ತತ್ಸತ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT