ಬೆಂಗಳೂರು: ರಾಯಚೂರಿನಲ್ಲಿ ಹೊಸ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ 2017-18ನೇ ಸಾಲಿನ ಬಜೆಟ್ ಮಂಡಿಸದ ಸಿಎಂ, ಹೈದರಾಬಾದ್ ಕರ್ನಾಟಕದಲ್ಲಿ ಉತ್ತನ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ರಾಯಚೂರಿನಲ್ಲಿ ಹೊಸ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಎಲ್ಲಾ ಕಾಲೇಜುಗಳು ಈ ಹೊಸ ವಿಶ್ವವಿದ್ಯಾಲಯದ ವ್ಯಾಪ್ತಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಲದೆ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 2000ದ ಸಾಮಾನ್ಯ ಉಪ ಬಂಧಗಳನ್ನು ಜಾರಿಗೊಳಿಸಲು ಹಾಗೂ ವಿಶ್ವವಿದ್ಯಾಲಯಗಳ ಆಡಳಿತದಲ್ಲಿ ಪಾರದರ್ಶಕತೆಯನ್ನು ತರುವ ದೃಷ್ಟಿಯಿಂದ ಈ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಹೇಳಿದ್ದಾರೆ.
ಇನ್ನು ಶತಮಾನ ಪೂರೈಸಿದ ಬೆಂಗಳೂರು ವಿವಿಯ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ ಗೆ 25 ಕೋಟಿ ಹಾಗೂ ಧಾರವಾಡದ ಕರ್ನಾಟಕ ಕಾಲೇಜ್ ಗೆ 5 ಕೋಟಿ ರುಪಾಯಿಯನ್ನು ಮೂಲ ಸೌಕರ್ಯ ಹಾಗೂ ನವೀಕರಣಕ್ಕಾಗಿ ನೀಡುವುದಾಗಿ ಸಿಎಂ ಹೇಳಿದ್ದಾರೆ.