ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಕೆಆರ್ ಎಸ್ ಬೃಂದಾವನವನ್ನು ಅಮೆರಿಕಾದ ಡಿಸ್ನಿ ಲ್ಯಾಂಡ್ ರೀತಿ ಅಭಿವೃದ್ಧಿ ಪಡಿಸಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಈಗಾಗಲೇ 1200 ಕೋಟಿ ರೂ.ಗಳ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ನಡೆದಿದೆ.
ಯೋಜನಾ ವರದಿ ಮತ್ತು ಮಾಸ್ಟರ್ ಪ್ಲಾನ್ ತಯಾರಿಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರಾದ ಕನ್ಸಲ್ಟೆನ್ಸಿಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಈಗಾಗಲೇ 3 ಕೋಟಿ ರೂ. ವೆಚ್ಚ ಮಾಡಲಾಗಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಮೆರಿಕಾದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆ.ಆರ್.ಎಸ್.ಅಭಿವೃದ್ಧಿಪಡಿಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಈ ಸಂಬಂಧ ಡಿಪಿಆರ್ ತಯಾರಿಕೆಗೆ 5 ಕೋಟಿ ರೂ. ಅನುದಾನವನ್ನು ಜಲ ಸಂಪನ್ಮೂಲ ಇಲಾಖೆಯಿಂದ ನೀಡಲಾಗಿದೆ.
ಕಳೆದ ಎರಡು ದಶಕಗಳಲ್ಲಿ ಕೆಆರ್‍ಎಸ್ ಅಣೆಕಟ್ಟಿನ ಬೃಂದಾವನ ಉದ್ಯಾನವನದ ಜನಪ್ರಿಯತೆ ಕುಗ್ಗಿರುವುದು ಕಂಡು ಬಂದಿದೆ. ಬೃಂದಾವನದ ಐತಿಹಾಸಿಕ ವೈಭವವನ್ನು ಮರುಕಳಿಸುವಂತೆ ಮಾಡಲು ಸರ್ಕಾರ ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಉದ್ಯಾನವನವನ್ನು ಖಾಸಗಿ ಸಹಭಾಗಿತ್ವದಲ್ಲಿ ಪಿಪಿಪಿ ಮಾದರಿಯಲ್ಲಿ ಡಿಸ್ನಿಲ್ಯಾಂಡ್ ನಂತೆ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.