ಮುಂಬಯಿ: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಮತ್ತೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಹರಿಯಾಣದ ಫತೇಹಾಬಾದ್ ನಿವಾಸಿ ಹರ್ಪಾಲ್ ಸಿಂಗ್ (34) ಬಂಧಿತ ಆರೋಪಿ. ಸೋಮವಾರ ಸಂಜೆ ಮುಂಬೈ ಅಪರಾಧ ವಿಭಾಗದ ತಂಡ ಆತನ ಸ್ವಗ್ರಾಮದಿಂದ ಬಂಧಿಸಿ ಮುಂಬೈಗೆ ಕರೆತಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ಮುಂಜಾನೆ ಆತನನ್ನು ಮುಂಬೈಗೆ ಕರೆತರಲಾಗಿದ್ದು, ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಪಾಲ್ ಸಿಂಗ್ ಸೇರಿ ಈವರೆಗೆ 6 ಮಂದಿಯನ್ನು ಬಂಧಿಸಲಾಗಿದೆ. ಏಪ್ರಿಲ್ 14ರ (ಭಾನುವಾರ) ಮುಂಜಾನೆ 5 ಗಂಟೆ ವೇಳೆಗೆ ಎರಡು ಬೈಕ್‌ಗಳಲ್ಲಿ ಬಂದ ಇಬ್ಬರು ಆರೋಪಿಗಳು ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಸಲ್ಮಾನ್ ಖಾನ್ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಎದುರು ನಾಲ್ಕು ಸುತ್ತು ಗುಂಡು ಹಾರಿಸಿ, ಸ್ಥಳದಿಂದ ಪರಾರಿಯಾಗಿದ್ದರು.