ಮುಂಬೈ: ಬಿಜೆಪಿ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್ ಅಭಿನಯದ ವಿವಾದಿತ ‘ಎಮರ್ಜೆನ್ಸಿ’ ಚಿತ್ರಕ್ಕೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್(ಸಿಬಿಎಫ್‌ಸಿ) ಕೊನೆಗೂ ಸೆನ್ಸಾರ್ ಪ್ರಮಾಣಪತ್ರ ನೀಡಿದೆ.
ಕಂಗನಾ ಅವರು ಗುರುವಾರ ಈ ಸುದ್ದಿಯನ್ನು ತಮ್ಮ ಎಕ್ಸ್ ಖಾತೆಯಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
"ನಮ್ಮ ಎಮರ್ಜೆನ್ಸಿ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಪ್ರಮಾಣಪತ್ರ ನೀಡಿದೆ ಎಂದು ಹೇಳಲು ಸಂತೋಷವಾಗುತ್ತಿದೆ. ನಾವು ಶೀಘ್ರದಲ್ಲೇ ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸುತ್ತೇವೆ. ನಿಮ್ಮ ತಾಳ್ಮೆ ಮತ್ತು ಬೆಂಬಲಕ್ಕೆ ಧನ್ಯವಾದಗಳು" ಎಂದು ಕಂಗನಾ ಪೋಸ್ಟ್ ಮಾಡಿದ್ದಾರೆ.
ಕಾಂಗ್ರೆಸ್ ವಿರೋಧಿಯಾಗಿ ಗುರುತಿಸಿಕೊಂಡಿರುವ ಕಂಗನಾ ರಣಾವತ್ ಅವರು ರಾಜಕೀಯ ಲಾಭಕ್ಕಾಗಿ ತುರ್ತು ಪರಿಸ್ಥಿತಿಯ ವಿಷಯವನ್ನು ಆಯ್ಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ ಮತ್ತು ಅದರಲ್ಲಿ ಸಿಖ್ ಸಮುದಾಯವನ್ನು ಗುರಿಯಾಗಿಸಲಾಗಿದೆ ಎಂದು ಆರೋಪಿಸಿ ಶಿರೋಮಣಿ ಅಕಾಲಿದಳ(ಎಸ್‌ಎಡಿ) ಕೋರ್ಟ್ ಮೆಟ್ಟಿಲೇರಿತ್ತು.
ಚಿತ್ರದ ಟ್ರೇಲರ್ ಬಿಡುಗಡೆಯಾದ ಬಳಿಕ ಜನ ಅದರ ವಿರುದ್ಧ ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು. 'ಎಮರ್ಜೆನ್ಸಿ' ಸೆಪ್ಟೆಂಬರ್ 6 ರಂದೇ ಬಿಡುಗಡೆಗೆ ನಿರ್ಧರಿಸಲಾಗಿತ್ತು. ಆದರೆ ವಿವಾದಗಳು ಸುತ್ತಿಕೊಂಡ ಕಾರಣ, ಅದರ ಬಿಡುಗಡೆ ದಿನಾಂಕವನ್ನು ಮುಂದೂಡಬೇಕಾಯಿತು. ಈ ಸಿನಿಮಾವನ್ನು ಬ್ಯಾನ್ ಮಾಡಬೇಕೆಂದು ಜನ ಒತ್ತಾಯಿಸುತ್ತಿದ್ದರೂ ಇತ್ತೀಚೆಗೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿತ್ತು. ಅಲ್ಲದೆ, ಸೆನ್ಸಾರ್ ಮಂಡಳಿಯ ಪ್ರಮಾಣಪತ್ರಕ್ಕಾಗಿ ಹಲವಾರು ಬದಲಾವಣೆಗಳನ್ನು ಮಾಡುವಂತೆ ನಿರ್ಮಾಪಕರಿಗೆ ಸೂಚಿಸಿತ್ತು. ಇದೀಗ ಸೆನ್ಸಾರ್ ಮಂಡಳಿಯ ಪ್ರಮಾಣಪತ್ರವನ್ನು ಪಡೆದುಕೊಂಡಿದೆ.