ಸಿಸಿಬಿ ದಾಖಲಿಸಿದ್ದ ಎಫ್ಐಆರ್ ರದ್ದತಿಗೆ ಹೈಕೋರ್ಟ್ ಮೊರೆ ಹೋದ ನಟಿ ಶ್ರುತಿ ಹರಿಹರನ್
ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಪ್ರಕರಣದಲ್ಲಿ ಸೈಬರ್ ಕ್ರೈಂ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ನಟಿ ಶ್ರುತಿ ಹರಿಹರನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ...
ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಪ್ರಕರಣದಲ್ಲಿ ಸೈಬರ್ ಕ್ರೈಂ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ನಟಿ ಶ್ರುತಿ ಹರಿಹರನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಶ್ರುತಿಯವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಇಂದು ಈ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಅರ್ಜುನ್ ಸರ್ಜಾ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವುದು ಮತ್ತು ವಂಚನೆ ಮಾಡಿದ್ದಾರೆಂದು ಎಫ್ಐಆರ್ ದಾಖಲಾಗಿದೆ. ಆದರೆ, ಅರ್ಜುನ್ ಮತ್ತು ತನ್ನ ನಡುವೆ ಯಾವುದೇ ವ್ಯವಹಾರ ನಡೆದಿಲ್ಲ. ಹೀಗಿರುವಾಗ ವಂಚನೆ ಮಾಡುವುದಕ್ಕೆ ಸಾಧ್ಯವೇ ಇಲ್ಲ. ಆದರೂ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಅರ್ಜುನ್ ಸರ್ಜಾ ವಿರುದ್ಧ ನಾನು ಯಾವುದೇ ರೀತಿಯ ಅಪಮಾನಕಾರಿ ಹೇಳಿಕೆ ಪ್ರಕಟಿಸಿಲ್ಲ. ಆದರೂ ಪೊಲೀಸರು ವ್ಯಾಪ್ತಿ ಮೀರಿ ಎಫ್ಐಆರ್'ನಲ್ಲಿ ಎರಡು ಆರೋಪಗಳನ್ನು ಹೊರಿಸಿದ್ದಾರೆ. ಆದ್ದರಿಂದ ಎಫ್ಐಆರ್ ರದ್ದು ಮಾಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣಗಳಾದ ಫೇಸ್'ಬುಕ್, ಟ್ವಿಟರ್, ಇನ್ ಸ್ಟಾಗ್ರಾಂನಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಅವಹೇಳನಕಾರಿ ಹೇಳಿಕೆಗಳನ್ನು ಪ್ರಕಟಿಸಿದ್ದಾರೆ. ನಟ ಅರ್ಜುನ್ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಿದ್ದಾರೆಂದು ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಶಿವಾರ್ಜುನ್ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಅವರಿಗೆ ದೂರು ನೀಡಿದ್ದರು.