ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕಿ ಥೈಲ್ಯಾಂಡ್ ನಲ್ಲಿ ಜಾಲಿ ಮೂಡ್ ನಲ್ಲಿರುವ ನಟ ದರ್ಶನ್ ಗೆ ಈಗ ನಡುಕ ಶುರುವಾಗಿದೆ. ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಜಾಮೀನು ನೀಡಿದ್ದ ಹೈಕೋರ್ಟ್ ಅನ್ನು ತೀವ್ರವಾಗಿ ಟೀಕಿಸಿದ್ದು ಜಾಮೀನು ನೀಡುವಲ್ಲಿ ಹೈಕೋರ್ಟ್ ನ್ಯಾಯಾಧೀಶರು ಈ ರೀತಿಯಾದ ತಪ್ಪು ಮಾಡಬಹುದಾ ಎಂದು ಸುಪ್ರೀಂಕೋರ್ಟ್ ಕಟುವಾಗಿ ಪ್ರಶ್ನಿಸಿದೆ. ಹೀಗಾಗಿ ದರ್ಶನ್ ಜಾಮೀನು ರದ್ದಾಗುವ ಸಾಧ್ಯತೆ ಇದೆ. ಇದರ ಮಧ್ಯೆ ಸುಪ್ರೀಂ ಕೋರ್ಟ್ ವಿಚಾರಣೆ ಸಯದಲ್ಲಿ ಎತ್ತಿದ ಪ್ರಶ್ನೆಗಳನ್ನು ಉಲ್ಲೇಖಿಸಿ ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಭಾರತದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಬೆಳಕಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ ಎಂದು ರಮ್ಯಾ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಜಾಮೀನು ನೀಡುವಾಗ ಹೈಕೋರ್ಟ್ ತೆಗೆದುಕೊಂಡ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.