ಬೆಂಗಳೂರು: ನಿರ್ದೇಶಕ ಎಸ್.ನಾರಾಯಣ್ ಅವರ ಹೆಸರು ಹಾಗೂ ಫೋಟೋ ಬಳಸಿಕೊಂಡು ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದಿದ್ದು, ಅವಹೇಳನಕಾರಿಯಾಗಿ ಪೋಸ್ಟ್ ಹಾಕಿರುವುದು ಇದೀಗ ಬೆಳಕಿಗೆ ಬಂದಿದೆ.
ಈ ಸಂಬಂಧ ಎಸ್.ನಾರಾಯಣ್ ಅವರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಬುಧವಾರ ದೂರು ನೀಡಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ದೂರು ದಾಖಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ನಾರಾಯಣ್ ಅವರು, ನನ್ನ ಹೆಸರಿನಲ್ಲಿ ಫೇಸ್‌ಬುಕ್ ಖಾತೆಯೇ ಇಲ್ಲ. ಆದರೆ, ದುಷ್ಕರ್ಮಿಗಳು ನಕಲಿ ಪ್ರೊಫೈಲ್ ಸೃಷ್ಟಿಸಿ ನಟರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಪೋಸ್ಟ್'ಗಳನ್ನು ಮಾಡುತ್ತಿದ್ದಾರೆ, ಇದರಿಂದಾಗಿ ಅವಮಾನವಾಗುತ್ತಿದೆ ಎಂದು ಹೇಳಿದ್ದಾರೆ.
ಕಳೆದ 6-7 ತಿಂಗಳಿನಿಂದ ಅವರು ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದಾರೆ. ಆದರೆ, ಈ ಬಗ್ಗೆ ನನಗೆ ನಾಲ್ಕು ದಿನಗಳ ಹಿಂದಷ್ಟೇ ಗಮನಕ್ಕೆ ಬಂದಿದೆ. ಹೀಗಾಗಿ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ದೂರು ದಾಖಲಿಸಿದ್ದೇನೆಂದು ಹೇಳಿದ್ದಾರೆ.