ಬೆಂಗಳೂರು: ಸ್ಯಾಂಡಲ್‌ವುಡ್ ನಟ ಧನ್ವೀರ್ ಹಾಗೂ ವಿಜಯಲಕ್ಷ್ಮಿ ನಡುವಿನ ಮುಸುಕಿನ ಗುದ್ದಾಟ ತಾರಕಕ್ಕೇರಿದ್ದು, ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ಅವರು ನಗರದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ದೂರು ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ವಾಹಿನಿಯೊಂದು ವರದಿ ಮಾಡಿದ್ದು, ಬೆಂಗಳೂರಿನ 37ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಈ ದೂರು ಸಲ್ಲಿಕೆಯಾಗಿದೆ ಎಂದು ಹೇಳಲಾಗಿದೆ.
ನಟ ಧನ್ವೀರ್ ಅವರು ತಮ್ಮ ವಿರುದ್ಧ ಮಾನನಷ್ಟ ಆಗುವಂತಹ ಹೇಳಿಕೆಗಳನ್ನು ನೀಡಿದ್ದು, ಆ ಹೇಳಿಕೆಗಳನ್ನು ಮಾಧ್ಯಮ ಹಾಗೂ ಸಾರ್ವಜನಿಕವಾಗಿ ಪ್ರಕಟಿಸಿ ಪ್ರಸಾರ ಮಾಡಲಾಗಿದೆ ಎಂದು ವಿಜಯಲಕ್ಷ್ಮಿ ದೂರಿನಲ್ಲಿ ಆರೋಪಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 356(2) ರ ಅಡಿಯಲ್ಲಿ ಮಾನನಷ್ಟ ಆರೋಪ ಹೊರಿಸಲಾಗಿದ್ದು, ಆರೋಪಕ್ಕೆ ಸಂಬಂಧಿಸಿದ ಎಲೆಕ್ಟ್ರಾನಿಕ್ ದಾಖಲೆಗಳು, ಆಡಿಯೋ/ವೀಡಿಯೋ ರೆಕಾರ್ಡಿಂಗ್‌ಗಳನ್ನು ಸೂಕ್ತ ಸಾಕ್ಷ್ಯವಾಗಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ವಿಜಯಲಕ್ಷ್ಮೀ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಜೊತೆಗೆ, ಈ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳ ವಿಚಾರಣೆಗೆ ಅವಕಾಶ ನೀಡಬೇಕು ಹಾಗೂ ಬಿಎನ್‌ಎಸ್ ಸೆಕ್ಷನ್ 222(1) ರ ಅಡಿಯಲ್ಲಿ ಈ ಖಾಸಗಿ ದೂರನ್ನು ಪರಿಗಣಿಸಿ, ಆರೋಪಿ ಧನ್ವೀರ್ ವಿರುದ್ಧ ಸೆಕ್ಷನ್ 227 ರ ಅಡಿಯಲ್ಲಿ ಸಮನ್ಸ್ ಜಾರಿಗೊಳಿಸಬೇಕೆಂದು ನ್ಯಾಯಾಲಯಕ್ಕೆ ಕೋರಲಾಗಿದೆ ಎಂದು ತಿಳಿದುಬಂದಿದೆ.