ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಸುಪ್ರೀಂ ಕೋರ್ಟ್ ಬುಧವಾರ ತಾತ್ಕಾಲಿಕ ರಿಲೀಫ್ ನೀಡಿದ್ದು, ಇಂಗ್ಲೆಂಡ್ ವಿರುದ್ಧದ ಉಳಿದ ಟೆಸ್ಟ್ ಪಂದ್ಯಗಳಿಗೆ ಹಣ ಬಿಡುಗಡೆ ಮಾಡಲು ಅನುಮತಿ ನೀಡಿದೆ.
ಭಾರತ- ಇಂಗ್ಲೆಂಡ್ ನಡುವೆ ಎರಡು ಪಂದ್ಯಗಳು ಬಾಕಿ ಉಳಿದಿದ್ದು, ಆ ಎರಡು ಪಂದ್ಯಗಳಿಗೆ ಒಟ್ಟು 1.33 ಕೋಟಿ ರುಪಾಯಿ ಬಿಡುಗಡೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಅಲ್ಲದೆ ಈ ಪಂದ್ಯಗಳಿಂದ ಬರುವ ಆದಾಯದ ಬಗ್ಗೆಯೂ ಅಫಿಡವಿಟ್ ಸಲ್ಲಿಸುವಂತೆ ಬಿಸಿಸಿಐಗೆ ಸೂಚಿಸಿದೆ.
ಇನ್ನು ಇಂಗ್ಲೆಂಡ್ ವಿರುದ್ಧದ ಏಕದಿನ ಹಾಗೂ ಟಿ20 ಪಂದ್ಯಗಳಿಗೂ ಪ್ರತಿ ಪಂದ್ಯಕ್ಕೆ 25 ಲಕ್ಷ ರುಪಾಯಿ ಬಿಡುಗಡೆ ಮಾಡಲು ಕೋರ್ಟ್ ಒಪ್ಪಿಗೆ ಸೂಚಿಸಿದೆ.
ಇಂಗ್ಲೆಂಡ್ ವಿರುದ್ಧದ ಉಳಿದ ಪಂದ್ಯಗಳಿಗೆ ಹಣ ಬಳಕೆ ಮಾಡಿಕೊಳ್ಳಲು ಅನುವು ಮಾಡಿಕೊಡುವಂತೆ ಕೋರಿ ಬಿಸಿಸಿಐ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಬಿಸಿಸಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಹಣ ಬಳಕೆ ಮಾಡಿಕೊಳ್ಳಲು ಅನುಮತಿ ನೀಡಿದೆ.
ನಾಲ್ಕನೇ ಟೆಸ್ಟ್ ಪಂದ್ಯ ಡಿ.8 ರಿಂದ ಮುಂಬೈನಲ್ಲಿ ನಡೆಯಲಿದ್ದು, ಕೊನೆಯ ಪಂದ್ಯ ಡಿ.16 ರಿಂದ ಚೆನ್ನೈನಲ್ಲಿ ನಡೆಯಲಿದೆ.