ಕ್ರಿಕೆಟ್

ಟಿ20 ವಿಶ್ವಕಪ್: ಆಸಿಸ್ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ, ಲಂಕಾ ಮಣಿಸಿದ ಆಫ್ರಿಕಾ

Srinivasamurthy VN

ದುಬೈ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಇಂದು ನಡೆದ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯಗಳಿಸಿದರೆ, ಶ್ರೀಲಂಕಾ ವಿರುದ್ಧ ದಕ್ಷಿಣ ಆಫ್ರಿಕಾ 4 ವಿಕೆಟ್ ಗಳ ಗೆಲುವು ಸಾಧಿಸಿದೆ.

ತೀವ್ರ ಕುತೂಹಲ ಕೆರಳಿಸಿದ್ದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ನಿಗದಿತ 20 ಓವರ್ ಗಳಲ್ಲಿ 125 ರನ್ ಗಳನ್ನಷ್ಟೇ ಗಳಿಸಿತು. ಇಂಗ್ಲೆಂಡ್ ವೇಗಿಗಳ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ಅಲ್ಪ ಮೊತ್ತಕ್ಕೆ ಕುಸಿಯಿತು. ಈ ಸಾಧಾರಣ ಮೊತವನ್ನು ಬೆನ್ನು ಹತ್ತಿದ ಇಂಗ್ಲೆಂಡ್ ತಂಡ ಜಾಸ್ ಬಟ್ಲರ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಕೇವಲ 11.4 ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 126ರನ್  ಗಳಿಸಿ 8 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿತು.

ಇದರೊಂದಿಗೆ ಟೂರ್ನಿಯಲ್ಲಿ ಸತತ ಮೂರನೇ ಗೆಲುವು ದಾಖಲಿಸಿದ ಇಂಗ್ಲೆಂಡ್, ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅತ್ತ ಮೊದಲೆರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ಆಸೀಸ್ ಮೂರನೇ ಪಂದ್ಯದಲ್ಲಿ ಹೀನಾಯ ಸೋಲಿನ ಮುಖಭಂಗಕ್ಕೊಳಗಾಗಿದೆ. ಅಲ್ಲದೆ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. 

ಮತ್ತೊಂದು ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ದಕ್ಷಿಣ ಆಫ್ರಿಕಾ 4 ವಿಕೆಟ್ ಗಳ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ 20 ಓವರ್ ಗಳಲ್ಲಿ 142 ರನ್ ಗಳಿಸಿತು. ಇದನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 146ರನ್ 4 ವಿಕೆಟ್ ಗಳ ಗೆಲವು ಸಾಧಿಸಿತು. 

SCROLL FOR NEXT