ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಪಿಎಲ್ 2025ನೇ ಆವೃತ್ತಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮುಂಬೈ ಇಂಡಿಯನ್ಸ್ (MI) ವಿರುದ್ಧ 12 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ಬರೋಬ್ಬರಿ 10 ವರ್ಷಗಳ ಬಳಿಕ ಆರ್‌ಸಿಬಿ ಮುಂಬೈನ ವಾಂಖೆಡೆಯಲ್ಲಿ ಗೆಲುವು ಸಾಧಿಸಿದೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವಿನ ಸಂಭ್ರಮದಲ್ಲಿರುವಾಗಲೇ ಆರ್‌ಸಿಬಿ ನಾಯಕ ರಜತ್ ಪಾಟೀದಾರ್ ಅವರಿಗೆ ಬಿಸಿಸಿಐ ಶಾಕ್ ನೀಡಿದ್ದು, ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ದಂಡ ವಿಧಿಸಿದೆ.
ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ ಲೆವೆಲ್ 1 ಅಪರಾಧ ಮಾಡಿದ್ದಾರೆ ಮತ್ತು ಮ್ಯಾಚ್ ರೆಫರಿಯ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ. ಸ್ಲೋ ಓವರ್ ರೇಟ್ ಅಪರಾಧಕ್ಕಾಗಿ ರಜತ್ ಪಾಟೀದಾರ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ' ಎಂದು ಬಿಸಿಸಿಐನ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಮುಂಬೈ ಇಂಡಿಯನ್ಸ್ ವಿರುದ್ಧ ರಜತ್ ಪಾಟೀದಾರ್ ಅವರ ಅದ್ಭುತ ನಾಕ್ ತಂಡವನ್ನು 12 ರನ್‌ಗಳ ಜಯದತ್ತ ಕೊಂಡೊಯ್ಯಲು ನೆರವಾಯಿತು. ಮೊದಲ ಇನಿಂಗ್ಸ್‌ನಲ್ಲಿ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಿತು. ರಜತ್ ಪಾಟಿದಾರ್ 32 ಎಸೆತಗಳಲ್ಲಿ 200 ಸ್ಟ್ರೈಕ್ ರೇಟ್‌ನೊಂದಿಗೆ 64 ರನ್ ಗಳಿಸಿದರು. ಈ ಪ್ರದರ್ಶನಕ್ಕಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು.
10 ವರ್ಷಗಳ ನಂತರ ವಾಂಖೆಡೆ ಆರ್‌ಸಿಬಿ ಕೈವಶ
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಾಂಖೆಡೆ ಕ್ರೀಡಾಂಗಣದಲ್ಲಿ 10 ವರ್ಷಗಳ ನಂತರ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ. ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 221 ರನ್ ಗಳಿಸಿತು. 222 ರನ್ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಕೇವಲ 209 ರನ್ ಗಳಿಸಿತು. ಇದರ ಪರಿಣಾಮವಾಗಿ ಆರ್‌ಸಿಬಿ 12 ರನ್‌ಗಳ ರೋಚಕ ಜಯ ಸಾಧಿಸಿತು.
ಆರ್‌ಸಿಬಿ ಆಡಿರುವ ನಾಲ್ಕು ಪಂದ್ಯಗಳಲ್ಲಿ 3ರಲ್ಲಿ ಜಯ ಸಾಧಿಸುವ ಮೂಲಕ 6 ಅಂಕಗಳನ್ನು ಪಡೆದು ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರನೇ ಸ್ಥಾನದಲ್ಲಿದೆ.