ವಿಶಾಖಪಟ್ಟಣ: ಇಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದಾರೆ. ಕ್ರಿಕೆಟ್ ಇತಿಹಾಸದಲ್ಲಿ
20,000 ಅಂತಾರಾಷ್ಟ್ರೀಯ ರನ್ ಗಳಿಸಿದ ಭಾರತದ ನಾಲ್ಕನೇ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾದರು.
271 ರನ್‌ಗಳ ಗುರಿಯನ್ನು ಬೆನ್ನಟ್ಟುವ ಮೂಲಕ ಭಾರತ ತಂಡವು 18 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 90 ರನ್ ಗಳಿಸಿ ಉತ್ತಮ ಆರಂಭ ಪಡೆದಿದೆ. ರೋಹಿತ್ ಮತ್ತು ಯಶಸ್ವಿ ಜೈಸ್ವಾಲ್ ಕ್ರೀಸ್‌ನಲ್ಲಿದ್ದಾರೆ.
ಇದಕ್ಕೂ ಮುನ್ನಾ ಆತಿಥೇಯರು ದಕ್ಷಿಣ ಆಫ್ರಿಕಾವನ್ನು 270 ರನ್‌ಗಳಿಗೆ ಆಲೌಟ್ ಮಾಡಿದರು. ಪ್ರಸಿದ್ಧ್ ಕೃಷ್ಣ ಮತ್ತು ಕುಲದೀಪ್ ಯಾದವ್ ತಲಾ ನಾಲ್ಕು ವಿಕೆಟ್‌ಗಳನ್ನು ಪಡೆದರು.
ನಾಯಕ ಕೆಎಲ್ ರಾಹುಲ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ತಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಪ್ರಸಿದ್ಧ್ ಕೃಷ್ಣ ಉಳಿಸಿಕೊಂಡರು. ಕಳಪೆ ಆರಂಭದಿಂದ ಚೇತರಿಸಿಕೊಂಡು ದಕ್ಷಿಣ ಆಫ್ರಿಕಾದ ಮಧ್ಯಮ ಕ್ರಮಾಂಕವನ್ನು ಹಳಿ ತಪ್ಪಿಸಿದರು.
ದಕ್ಷಿಣ ಆಫ್ರಿಕಾ ಪರ, ಕ್ವಿಂಟನ್ ಡಿ ಕಾಕ್ 106 ರನ್ ಗಳಿಸಿ ಅತಿ ಹೆಚ್ಚು ರನ್ ಗಳಿಸಿದರು. ಸರಣಿಯನ್ನು ಗೆಲ್ಲಲು ಮತ್ತು ಸತತ ಎರಡನೇ ಏಕದಿನ ಸರಣಿ ಸೋಲನ್ನು ತಪ್ಪಿಸಿಕೊಳ್ಳಲು ಭಾರತ ಈ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.