ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ 2025ನೇ ಆವೃತ್ತಿಯು ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು, ಪ್ರತಿ ದಿನವೂ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಾಗುತ್ತಿದೆ. ಈ ಆವೃತ್ತಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ಯಾರು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.
ಆರ್‌ಸಿಬಿ ತಂಡದ ನಾಯಕನನ್ನಾಗಿ ರಜತ್ ಪಾಟೀದಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಬಲಿಷ್ಠ ತಂಡವನ್ನು ಕಟ್ಟಿದ್ದು, ಅಭಿಮಾನಿಗಳಲ್ಲಿ ಹೊಸ ಭರವಸೆ ಹುಟ್ಟುಹಾಕಿದೆ. ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಆವೃತ್ತಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಆರ್‌ಸಿಬಿ ಈ ಬಾರಿ ಯಾರನ್ನು ನಾಯಕನನ್ನಾಗಿ ಆಯ್ಕೆ ಮಾಡಲಿದೆ ಎನ್ನುವ ಕುತೂಹಲ ಹೆಚ್ಚಾಗಿತ್ತು. ಇದೀಗ ಆ ಕುತೂಹಲಕ್ಕೆ ತೆರೆಬಿದ್ದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್‌ನ ಕೊನೆಯ ಮೂರು ಆವೃತ್ತಿಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಿದ್ದ ಫಾಫ್ ಡು ಪ್ಲೆಸಿಸ್ ಇದೀಗ ಆರ್‌ಸಿಬಿ ಜೊತೆಗಿಲ್ಲ. RCB ನಾಯಕತ್ವದಿಂದ ಕೆಳಗಿಳಿದಿದ್ದ ವಿರಾಟ್ ಕೊಹ್ಲಿ ಅವರನ್ನೇ ಈ ಆವೃತ್ತಿಯಲ್ಲಿ ತಂಡದ ನಾಯಕನಾಗಿ ಮಾಡಲಾಗುತ್ತದೆ ಎಂದು ಊಹಿಸಲಾಗಿತ್ತು. ಆದರೆ, ಇದೀಗ ರಜತ್ ಪಾಟೀದಾರ್ ಅವರನ್ನು ತಂಡದ ನೂತನ ನಾಯಕನನ್ನಾಗಿ ಘೋಷಸಿಲಾಗಿದೆ.
ಕಳೆದ ಮೂರು ಆವೃತ್ತಿಗಳಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸಿದ್ದ ಫಾಫ್ ಡುಪ್ಲೆಸಿಸ್‌ರನ್ನು ಮೆಗಾ ಹರಾಜಿಗೆ ಮುನ್ನ ತಂಡದಿಂದ ಕೈಬಿಡಲಾಗಿದ್ದು, ವಿರಾಟ್ ಕೊಹ್ಲಿ, ಯಶ್ ದಯಾಳ್ ಮತ್ತು ರಜತ್ ಪಾಟೀದಾರ್ ಅವರನ್ನು ಮಾತ್ರ ಉಳಿಸಿಕೊಂಡಿತ್ತು. 2025ರ ಮೆಗಾ ಹರಾಜಿನಲ್ಲಿ ಆರ್‌ಸಿಬಿ ಫಿಲ್ ಸಾಲ್ಟ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಟಿಮ್ ಡೇವಿಡ್, ಭುವನೇಶ್ವರ್ ಕುಮಾರ್, ಜಿತೇಶ್ ಶರ್ಮಾ, ದೇವದತ್ ಪಡಿಕ್ಕಲ್, ಜೋಶ್ ಹ್ಯಾಜಲ್‌ವುಡ್, ರೊಮಾರಿಯೋ ಶೆಫರ್ಡ್, ನುವಾನ್ ತುಷಾರ ಮತ್ತು ಸುಯಾಶ್ ಶರ್ಮಾಸೇರಿದಂತೆ ಅನೇಕ ಉತ್ತಮ ಆಟಗಾರರನ್ನು ಖರೀದಿ ಮಾಡಿದೆ.