ದುಬೈ: ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, ಟೀಂ ಇಂಡಿಯಾ ಆಟಗಾರರು ತೋಳಿಗೆ ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ದೇಶೀಯ ಕ್ರಿಕೆಟ್ ದಿಗ್ಗಜ ಪದ್ಮಾಕರ್ ಶಿವಾಳ್ಕರ್ ಅವರಿಂದು ನಿಧನ ಹೊಂದಿದ್ದು, ಅವರಿಗೆ ಗೌರವ ಸಲ್ಲಿಸಲು ಆಸ್ಟ್ರೇಲಿಯಾ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಧರಿಸಿದ್ದಾರೆ.
ಶಿವಾಲ್ಕರ್ ಅವರು ಮುಂಬೈನಲ್ಲಿ ಕೊನೆಯುಸಿರೆಳೆದಿದ್ದು, ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರು ಅತ್ಯುತ್ತಮ ಸ್ಪಿನ್ನರ್‌ಗಳಲ್ಲಿ ಒಬ್ಬರಾಗಿದ್ದರು. ಬಿಷನ್ ಸಿಂಗ್ ಬೇಡಿ ಅವರಂತಹ ಆಟಗಾರರು ಟೀಂ ಇಂಡಿಯಾದಲ್ಲಿ ಆಡುತ್ತಿದ್ದರಿಂದ, ಶಿವಾಳ್ಕರ್ ಅವರಿಗೆ ಭಾರತ ತಂಡದಲ್ಲಿ ಆಡಲು ಅವಕಾಶ ಸಿಕ್ಕಿರಲಿಲ್ಲ. ಆದರೆ, ಅವರು ಭಾರತದ ಪರವಾಗಿ ಆಡಲು ಅವಕಾಶ ಸಿಗಲಿಲ್ಲ.
ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡುತ್ತಿದ್ದ ಎಡಗೈ ಸ್ಪಿನ್ನರ್ ಶಿವಾಳ್ಕರ್ ಅವರು 124 ಪ್ರಥಮ ದರ್ಜೆ ಪಂದ್ಯಗಳಲ್ಲಿ 589 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಶಿವಾಳ್ಕರ್ ಅವರಿಗೆ ಬಿಸಿಸಿಐ ಪ್ರತಿಷ್ಠಿತ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.