ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ಭಾರತ ಸರ್ಕಾರ ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅಭಿಪ್ರಾಯಪಟ್ಟಿದ್ದಾರೆ. ಕಳೆದ ವಾರ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುವ ಮೂಲಕ ಭಾರತದ ಮಾಜಿ ನಾಯಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ವಿರಾಟ್ ಕೊಹ್ಲಿ 2011ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು.
ಜಿಯೋಹಾಟ್‌ಸ್ಟಾರ್‌ನಲ್ಲಿ ಮಾತನಾಡಿದ ರೈನಾ, 'ಭಾರತೀಯ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ನೀಡಿದ ಕೊಡುಗೆಗಾಗಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು' ಎಂದು ಹೇಳಿದರು. ಇಲ್ಲಿಯವರೆಗೆ, ಸಚಿನ್ ತೆಂಡೂಲ್ಕರ್ ಈ ಗೌರವವನ್ನು ಪಡೆದ ಏಕೈಕ ಕ್ರಿಕೆಟಿಗನಾಗಿದ್ದಾರೆ.
ಇಂಗ್ಲೆಂಡ್ ಟೆಸ್ಟ್ ಸರಣಿಗೆ ಕೆಲವೇ ದಿನಗಳು ಬಾಕಿ ಇರುವಾಗ ವಿರಾಟ್ ಕೊಹ್ಲಿ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಇದಕ್ಕೂ ಮುನ್ನ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಕೂಡ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇದೀಗ ಭಾರತ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಲ್ಲದಂತಾಗಿದೆ.
ವಿರಾಟ್ ಕೊಹ್ಲಿ 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕಿಂಗ್‌ಸ್ಟನ್‌ನಲ್ಲಿ ಟೆಸ್ಟ್‌ಗೆ ಪದಾರ್ಪಣೆ ಮಾಡಿದರು. ಅವರು ಆಡಿರುವ 123 ಪಂದ್ಯಗಳಿಂದ 9,230 ರನ್‌ಗಳನ್ನು ಗಳಿಸಿದ್ದು, 46.85 ಸರಾಸರಿಯೊಂದಿಗೆ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ನಾಲ್ಕನೇ ಆಟಗಾರರಾಗಿದ್ದಾರೆ. ಕೊಹ್ಲಿಗೆ ದಂತಕಥೆ ಸುನೀಲ್ ಗವಾಸ್ಕರ್ ಅವರನ್ನು ಹಿಂದಿಕ್ಕಿ ಭಾರತದ ಪರ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಲು ಇನ್ನೂ 800 ರನ್‌ಗಳಿಗಿಂತ ಸ್ವಲ್ಪ ಕಡಿಮೆ ರನ್‌ಗಳ ಅಗತ್ಯವಿತ್ತು.
ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ, ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಭವಿಷ್ಯದ ಬಗ್ಗೆ ಹಲವು ಪ್ರಶ್ನೆಗಳು ಎದ್ದಿದ್ದವು. ಅನುಭವಿ ಬ್ಯಾಟ್ಸ್‌ಮನ್ 9 ಇನಿಂಗ್ಸ್‌ಗಳಲ್ಲಿ ಕೇವಲ 190 ರನ್ ಗಳಿಸಿದ್ದರು.