ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಭವಿಷ್ಯದಲ್ಲಿ ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಲು ಬಯಸಿದರೆ 2025/26 ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುವುದನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಡ್ಡಾಯಗೊಳಿಸಿದೆ ಎಂದು ವರದಿಯಾಗಿದೆ. ಕಳೆದ ವರ್ಷ ಟಿ20 ಮತ್ತು 2025ರ ಮೇನಲ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ಈ ಜೋಡಿ ಸದ್ಯ ಏಕದಿನ ಪಂದ್ಯಗಳಲ್ಲಿ ಮಾತ್ರ ಸಕ್ರಿಯವಾಗಿದೆ. ಕೊನೆಯದಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿತ್ತು. ಭಾರತದಲ್ಲಿ ನಡೆಯುವ 50 ಓವರ್‌ಗಳ ದೇಶೀಯ ಪಂದ್ಯಾವಳಿಯಾದ ವಿಜಯ್ ಹಜಾರೆ ಟ್ರೋಫಿ ಡಿಸೆಂಬರ್ 24 ರಿಂದ ಪ್ರಾರಂಭವಾಗಲಿದೆ.
ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ, ರೋಹಿತ್ ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ಗೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಈಮಧ್ಯೆ, ಕೊಹ್ಲಿ ಲಭ್ಯತೆಯ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ವರದಿ ಹೇಳಿದೆ. ಈ ಜೋಡಿಯು ಆಟದ ಒಂದು ಸ್ವರೂಪದಲ್ಲಿ ಮಾತ್ರ ಸಕ್ರಿಯವಾಗಿರುವುದರಿಂದ ಫಿಟ್ ಆಗಿರಲು ದೇಶೀಯ ಕ್ರಿಕೆಟ್‌ನಲ್ಲಿ ಆಡುವಂತೆ ಮಂಡಳಿ ನಿರ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ.
'ಭಾರತ ಪರ ಆಡಲು ಬಯಸಿದರೆ ದೇಶೀಯ ಕ್ರಿಕೆಟ್ ಆಡಲೇಬೇಕು ಎಂದು ಬಿಸಿಸಿಐ ಮತ್ತು ತಂಡದ ಆಡಳಿತ ಮಂಡಳಿ ಇಬ್ಬರಿಗೂ ತಿಳಿಸಿದೆ. ಅವರಿಬ್ಬರೂ ಎರಡು ಸ್ವರೂಪಗಳಿಂದ ನಿವೃತ್ತರಾಗಿರುವುದರಿಂದ, ಫಿಟ್ ಆಗಿರಲು ದೇಶೀಯ ಕ್ರಿಕೆಟ್ ಆಡಲೇಬೇಕು' ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಇದನ್ನೇ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಕೂಡ ಈ ಹಿಂದೆ ಹೇಳಿದ್ದರು. ಪತ್ರಿಕಾಗೋಷ್ಠಿಯಲ್ಲಿ, ಮುಂಬರುವ ಏಕದಿನ ವಿಶ್ವಕಪ್‌ಗೆ ಪರಿಗಣಿಸಬೇಕಾದರೆ ಆಟಗಾರರು ದೇಶೀಯ ಕ್ರಿಕೆಟ್‌ನಲ್ಲಿ ಆಡುವುದು ಕಡ್ಡಾಯ ಎಂದು ನಾವು ಸ್ಪಷ್ಟಪಡಿಸಿದ್ದೇವೆ' ಎಂದು ಹೇಳಿದರು.
ಈ ವರ್ಷದ ಆರಂಭದಲ್ಲಿ ರಣಜಿ ಟ್ರೋಫಿ ಪಂದ್ಯದ ಭಾಗವಾಗಿದ್ದಾಗ ರೋ-ಕೋ ಜೋಡಿ ಮೊದಲ ಬಾರಿಗೆ ದೇಶೀಯ ಕ್ರಿಕೆಟ್‌ಗೆ ಮರಳಿತು. ಇತ್ತೀಚೆಗೆ ಮುಕ್ತಾಯಗೊಂಡ ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿಯಲ್ಲಿ, ರೋಹಿತ್ 8, 73 ಮತ್ತು 121 ರನ್‌ಗಳನ್ನು ಗಳಿಸಿದರೆ, ಕೊಹ್ಲಿ 0, 0 ಮತ್ತು 74 ರನ್‌ಗಳನ್ನು ಗಳಿಸಿದರು.