ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಭಾನುವಾರ ಪಾಕಿಸ್ತಾನದ ಶಾಹಿದ್ ಅಫ್ರಿದಿ ಅವರ ದಾಖಲೆಯನ್ನು ಹಿಂದಿಕ್ಕಿ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
ಈ ಸರಣಿಗೂ ಮೊದಲು ರೋಹಿತ್ 349 ಸಿಕ್ಸರ್‌ಗಳನ್ನು ಬಾರಿಸಿದ್ದರು. 1996 ರಿಂದ 2015ರ ನಡುವೆ 398 ಏಕದಿನ ಪಂದ್ಯಗಳಲ್ಲಿ 351 ಸಿಕ್ಸರ್‌ಗಳನ್ನು ಬಾರಿಸಿದ್ದ ಅಫ್ರಿದಿ ಅವರಿಗಿಂತ ಹಿಂದುಳಿದಿದ್ದರು. ಆದರೆ ಇದೀಗ 352 ಸಿಕ್ಸರ್ ಸಿಡಿಸುವ ಮೂಲಕ ಮೊದಲ ಸ್ಥಾನಕ್ಕೇರಿದ್ದಾರೆ.
ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಪ್ರೆನೆಲನ್ ಸುಬ್ರಯೆನ್ ಎಸೆದ ಇನಿಂಗ್ಸ್‌ನ 15ನೇ ಓವರ್‌ನಲ್ಲಿ ರೋಹಿತ್ ಡೀಪ್ ಮಿಡ್‌ವಿಕೆಟ್‌ನಲ್ಲಿ ಸತತ ಎರಡು ಸಿಕ್ಸರ್‌ಗಳನ್ನು ಬಾರಿಸಿ ಆಫ್ರಿದಿ ಅವರ ದಾಖಲೆಯನ್ನು ಸರಿಗಟ್ಟಿದರು ಮತ್ತು ಕನಿಷ್ಠ ಇನಿಂಗ್ಸ್‌ಗಳಲ್ಲಿ ಅತಿ ಹೆಚ್ಚು ಏಕದಿನ ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವ ದಾಖಲೆ ಬರೆದರು.
38 ವರ್ಷದ ಬಲಗೈ ಬ್ಯಾಟರ್ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ 60ನೇ ಅರ್ಧಶತಕವನ್ನು ಪೂರೈಸಿದ ಸ್ವಲ್ಪ ಸಮಯದ ನಂತರ ಈ ದಾಖಲೆಯನ್ನು ನಿರ್ಮಿಸಿದರು.
ಅಂತಿಮವಾಗಿ ರೋಹಿತ್ 51 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳೊಂದಿಗೆ 57 ರನ್ ಗಳಿಸಿದರು.
ಈ ವರ್ಷದ ಆರಂಭದಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ತಮ್ಮ ತಂಡವನ್ನು ಪ್ರಶಸ್ತಿ ಗೆಲುವಿನತ್ತ ಮುನ್ನಡೆಸಿದ ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಸಕ್ರಿಯರಾಗಿರುವ ಭಾರತದ ಮಾಜಿ ನಾಯಕ, 2007ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದರು. ತಮ್ಮ 278ನೇ ಏಕದಿನ ಪಂದ್ಯದಲ್ಲಿ ಕೇವಲ 270ನೇ ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರು.