ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಬಳಿಕ ಭಾರತಕ್ಕೆ ಮರಳುತ್ತಿರುವ ರೋಹಿತ್ ಶರ್ಮಾ ಆಸ್ಟ್ರೇಲಿಯಾಗೆ ಭಾವನಾತ್ಮಕ ವಿದಾಯ ಹೇಳಿದ್ದಾರೆ.
ಹೌದು.. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮುಕ್ತಾಯಗೊಂಡಿದ್ದು, ಭಾರತ ಸರಣಿಯನ್ನು 1-2 ಅಂತರದಲ್ಲಿ ಸರಣಿ ಸೋತಿದೆಯಾದರೂ, ಅಂತಿಮ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡಕ್ಕೆ ಭರ್ಜರಿ ಜಯ ತಂದಿತ್ತರು.
ಟೀಂ ಇಂಡಿಯಾದ ಅನುಭವಿ ಬ್ಯಾಟರ್ಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಇದು ಕೊನೆಯ ಆಸ್ಟ್ರೇಲಿಯಾ ಪ್ರವಾಸ ಆಗಿದ್ದ ಕಾರಣ ಈ ಸರಣಿ ಇವರಿಬ್ಬರಿಗೆ ಒಂದು ರೀತಿಯ ಭಾವನಾತ್ಮಕ ಕ್ಷಣವಾಗಿತ್ತು. ಸರಣಿ ಭಾರತದ ಕೈತಪ್ಪಿದರೂ ಕೊನೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅದ್ಭುತ ಪ್ರದರ್ಶನ ನೀಡುವ ಮೂಲಕ ಅಭಿಮಾನಿಗಳನ್ನು ರಂಜಿಸಿದರು.
ಕೊನೆಯ ಆಸ್ಟ್ರೇಲಿಯಾ ಪ್ರವಾಸ ಎಂದಿದ್ದ ರೋ-ಕೋ
ಪಂದ್ಯ ಮುಗಿದ ಬಳಿಕ ಮಾತನಾಡಿದ ಇವರಿಬ್ಬರು ಇದು ತಮ್ಮ ಕೊನೆಯ ಆಸ್ಟ್ರೇಲಿಯಾ ಪ್ರವಾಸ ಎಂಬುದನ್ನು ಖಚಿತಪಡಿಸಿದ್ದರು. ಇದೀಗ ಆಸ್ಟ್ರೇಲಿಯಾದಿಂದ ಹೊರಡುವುದಕ್ಕೂ ಮುನ್ನ ರೋಹಿತ್ ಶರ್ಮಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಳ್ಳುವ ಮೂಲಕ ಆಸ್ಟ್ರೇಲಿಯಾಕ್ಕೆ ಭಾವನಾತ್ಮಕ ವಿದಾಯ ಹೇಳಿದ್ದಾರೆ.
ಇದೀಗ ಈ ಸರಣಿ ಮುಕ್ತಾಯದ ಬಳಿಕ ರೋಹಿತ್ ಶರ್ಮಾ ಭಾರತಕ್ಕೆ ಮರಳುತ್ತಿದ್ದು, ಸಿಡ್ನಿ ವಿಮಾನ ನಿಲ್ದಾಣದಲ್ಲಿ ರೋಹಿತ್ ಶರ್ಮಾ ತೆಗೆಸಿಕೊಂಡ ಒಂದು ಫೋಟೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ಸ್ವತಃ ರೋಹಿತ್ ಶರ್ಮಾ ಈ ಫೋಟೋವನ್ನು ತಮ್ಮ ಸಾಮಾಜಿಕ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದು 'ಕೊನೆಯ ವಿದಾಯ ಸಿಡ್ನಿ' ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ಇದೇ ತಮ್ಮ ಕೊನೆಯ ಆಸ್ಟ್ರೇಲಿಯಾ ಪ್ರವಾಸ ಎಂದು ಸ್ಪಷ್ಟಪಡಿಸಿದ್ದಾರೆ.
ರೋಹಿತ್ ಅವರ ಈ ಪೋಸ್ಟ್ ಸಾಕಷ್ಟು ವೈರಲ್ ಆಗುತ್ತಿದ್ದು, ಇದು ರೋಹಿತ್ ಅವರು ಏಕದಿನ ಕ್ರಿಕೆಟ್‌ನಿಂದ ನಿರ್ಗಮಿಸುವುದನ್ನು ಸೂಚಿಸುತ್ತಿದೆಯೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ.