ಚಿತ್ರದುರ್ಗ: ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ, ದೌರ್ಜನ್ಯ, ಲೈಂಗಿಕ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಬಗ್ಗೆ ಕಾನೂನು ತರಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಕಾನೂನು ಜಾರಿಗೆ ಒತ್ತಾಯ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಉಮಾಶ್ರೀ ತಿಳಿಸಿದರು.
ಭಾನುವಾರ ಅವರನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅತ್ಯಾಚಾರ, ದೌರ್ಜನ್ಯ ಮಾಡಿದವರಿಗೆ ಶಿಕ್ಷೆ ನೀಡಲು ಪೋಕ್ಸೋ ಕಾನೂನು ಇದೆ. ಇದರಿಂದ ತಪ್ಪು ಮಾಡಿದವರನ್ನು ಬಂಧಿಸಲಾಗುತ್ತಿದೆ. ಆದರೆ, ಅದನ್ನು ಮತ್ತಷ್ಟು ಬಲಪಡಿಸಬೇಕಿದೆ. ಅಲ್ಲದೆ ಅಂತಹ ತಪ್ಪು ಮಾಡಿದವರಿಗೆ ಗಲ್ಲು ಶಿಕ್ಷೆ ನೀಡುವಂತೆ ಜನರು ಒತ್ತಾಯಿಸಿದ್ದಾರೆ.
ಅದನ್ನು ಜಾರಿ ಮಾಡಬೇಕಾದರೆ ಕೇಂದ್ರ ಸರ್ಕಾರದ ಅನುಮತಿ ಬೇಕಾಗುತ್ತದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಪ್ರಸ್ತಾವ ಕಳುಹಿಸಲಾಗುವುದು. ಮಹಿಳೆ ಮೇಲೆ ದೌರ್ಜನ್ಯ ನಡೆಸುವವರ ಮೇಲೆ ಕ್ರಮ ತೆಗೆದುಕೊಳ್ಳಲು ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.