ಹುಬ್ಬಳ್ಳಿ: ಡಿಸೆಂಬರ್ 9 ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ಮುತ್ತಿಗೆ ಹಾಕುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ.
ಹುಬ್ಬಳ್ಳಿಯಲ್ಲಿ ಇಂದು ಬಿಜೆಪಿ ನಾಯಕರ ಸುದ್ಧಿಗೋಷ್ಠಿ ನಡೆಯಿತು. ಸುದ್ಧಿಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಡಿಸೆಂಬರ್ 9ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಅಭಿವೃದ್ಧಿ ಕುಂಠಿತವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಸುವರ್ಣ ಸೌಧವನ್ನು ಮುತ್ತಿಗೆ ಹಾಕುವುದಾಗಿ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಅಸಮರ್ಥ ಆಡಳಿತದಿಂದಾಗಿ ಶ್ರೀಸಾಮಾನ್ಯ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು. ಈರುಳ್ಳಿ, ಕಬ್ಬು ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ, ಸರ್ಕಾರದಲ್ಲಿ 2 ಪ್ರತ್ಯೇಕ ಗುಂಪುಗಳಾಗಿದ್ದು, ಅಸಮಾಧಾನದ ಹೊಗೆಯಾಡುತ್ತಿದೆ. ಇದರಿಂದಾಗಿ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಮಾಜಿ ಸಿ.ಎಂ. ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.
ಅಕ್ರಮ ಮರಳು ನೀತಿ ಸೇರಿದಂತೆ ಪ್ರಮುಖ ಸಮಸ್ಯೆಗಳ ವಿರುದ್ದ ಪ್ರತಿಭಟನೆ ನಡೆಸಲು ಬಿಜೆಪಿ ಸಿದ್ದವಾಗಿದೆ. ಬೆಳಗಾವಿಯ ಅಧಿವೇಶನದ ವೇಳೆ ಸುಮಾರು 50 ಸಾವಿರಕ್ಕೂ ಹೆಚ್ಚಿನ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಬಿಜೆಪಿ ಹೋರಾಟವನ್ನು ದಮನ ಮಾಡಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ. ಸುವರ್ಣಸೌಧದ ನಾಲ್ಕು ದಿಕ್ಕಿನಲ್ಲೂ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಸಿದ್ದವಾಗಿದ. ಬಿಜೆಪಿಯ ಈ ಬೃಹತ್ ಪ್ರತಿಭಟನೆಯನ್ನು ತಡೆಯಲು ರಾಜ್ಯ ಸರ್ಕಾರ ಸಿದ್ದವಾಗಿದೆ ಎಂದು ತಿಳಿಸಿದರು.
ನಾವು ಹೋರಾಟದಿಂದಲೇ ಮೇಲೆ ಬಂದವರು, ದಮನಕಾರಿ ನೀತಿಯಿಂದ ನಮ್ಮ ಪ್ರತಿಭಟನೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಜೋಶಿ ರಾಜ್ಯ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ. ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಪೊಲೀಸರು ಅಡ್ಡಿ ಪಡಿಸಿದರು.
ಆದರೆ ಕಾನೂನಾತ್ಮಕ ಹೋರಾಟಕ್ಕೆ ಬಿಜೆಪಿ ಸಿದ್ದವಾಗಿದೆ. ಡಿಸೆಂಬರ್ 9 ರೊಳಗೆ ಎಲ್ಲ ಸಮಸ್ಯೆಗಳು ನಿವಾರಣೆಯಾಗದಿದ್ದಲ್ಲಿ ನಮ್ಮ ಹೋರಾಟವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಪ್ರಹ್ಲಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.