ರಾಘವೇಶ್ವರ ಶ್ರೀಗಳಿಗೆ ಮಧ್ಯಂತರ ಜಾಮೀನು
ಬೆಂಗಳೂರು: ಶ್ಯಾಮ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಘವೇಶ್ವರ ಭಾರತಿ ಸ್ವಾಮಿಗಳಿಗೆ ನಗರದ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿ ಶ್ರೀಪರ ವಕೀಲರು ಕೋರ್ಟ್ಗೆ ಮನವಿ ಮಾಡಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ರಾಮಚಂದ್ರಪುರ ಮಠದ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿದ್ದು, ಇದಕ್ಕಾಗಿ 5 ಲಕ್ಷ ರೂಪಾಯಿ ಬಾಂಡ್ ಹಾಗೂ ಇಬ್ಬರ ಶೂರಿಟಿ ನೀಡುವಂತೆ ಕೋರ್ಟ್ ಸೂಚಿಸಿದೆ. ಶ್ರೀಗಳಿಗೆ ನೀಡಿರುವ ನಿರೀಕ್ಷಣಾ ಜಾಮೀನು 20 ದಿನಗಳವರೆಗೆ ಮಾತ್ರ ಸೀಮಿತವಾಗಿರುತ್ತದೆ.
ಹೊಸನಗರ ಶ್ರೀ ರಾಮಚಂದ್ರಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳನ್ನು ಬ್ಲಾಕ್ಮೇಲ್ ಮಾಡಿದ ಪ್ರಕರಣಕ್ಕೆ ಸಂಬಧಿಸಿದಂತೆ ಬಂಧಿತರಾಗಿರುವ ದಿವಾಕರ ಶಾಸ್ತ್ರಿಯ ಸಹೋದರ ಶ್ಯಾಮ ಪ್ರಸಾದ್ ಶಾಸ್ತ್ರಿ ಆಗಸ್ಟ್ 31 ರಂದು ನಾಡ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಶ್ಯಾಮ ಪ್ರಸಾದ್ ಶಾಸ್ತ್ರಿಗೆ ಬೆದರಿಕೆ ಕರೆಗಳು ಬರುತ್ತಿತ್ತು ಹೀಗಾಗಿ ಅವರು ಕೋವಿಯಿಂದ ಎದೆಗೆ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.