ಆರ್ಕಿಡ್ಸ್ ಶಾಲೆ ಸೋಮವಾರ ಪುನಾರಂಭ
ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಿಂದಾಗಿ ಬಾಗಿಲು ಹಾಕಿದ್ದ ಆರ್ಕಿಡ್ಸ್ ಶಾಲೆಯನ್ನು ಸೋಮವಾರದಿಂದ ಪುನಾರಂಭ ಮಾಡಲು ಪೋಷಕರ ಸಭೆಯಲ್ಲಿ ನಿರ್ಧರಿಸಲಾಗಿದೆ.
ಬೆಂಗಳೂರು: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಿಂದಾಗಿ ಬಾಗಿಲು ಹಾಕಿದ್ದ ಆರ್ಕಿಡ್ಸ್ ಶಾಲೆಯನ್ನು ಸೋಮವಾರದಿಂದ ಪುನಾರಂಭ ಮಾಡಲು ಪೋಷಕರ ಸಭೆಯಲ್ಲಿ ನಿರ್ಧರಿಸಲಾಗಿದೆ.
3 ವರ್ಷದ ಪುಟ್ಟ ಬಾಲಕಿ ಮೇಲೆ ನಡೆದ ಪೈಶಾಚಿಕ ಕೃತ್ಯದ ಬಳಿಕ ವಿವಾದಕ್ಕೀಡಾಗಿದ್ದ ಆರ್ಕಿಡ್ಸ್ ಶಾಲೆಯನ್ನು ಇದೇ ಸೋಮವಾರದಿಂದ ಪುನಾರಂಭಗೊಳಿಸಲು ಇಂದು ನಡೆದ ಪೋಷಕರಸಭೆಯಲ್ಲಿ ನಿರ್ಧರಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ನೇತೃತ್ವದಲ್ಲಿ ಇಂದು ನಡೆದ ಪೋಷಕರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಮಕ್ಕಳ ಸುರಕ್ಷತೆ ಕುರಿತಂತೆ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಪ್ರಮುಖವಾಗಿ ಮಕ್ಕಳ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಶಾಲೆಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಂತೆಯೇ ಮಕ್ಕಳನ್ನು ಮನೆಗಳಿಗೆ ಬಿಡುವ ಶಾಲಾ ಬಸ್‌ನಲ್ಲಿ ತಾತ್ಕಾಲಿಕವಾಗಿ ಓರ್ವ ಪೇದೆಯನ್ನು ನೇಮಿಸಬೇಕು ಎಂದೂ ಸಹ ಪೋಷಕರು ಮನವಿ ಮಾಡಿದ್ದಾರೆ. ಪೋಷಕರ ಒತ್ತಾಯಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಮಾತನಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಇಂದು ಸಂಜೆ ಆರ್ಕಿಡ್ಸ್ ಶಾಲೆಯ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಮತ್ತು ಜಂಟಿ ಸಹಾಯಕ ಆಯುಕ್ತ ಅಲೋಕ್ ಕುಮಾರ್ ಅವರು ಪಾಲ್ಗೊಂಡಿದ್ದರು.