ಬೆಂಗಳೂರಿನಲ್ಲಿ ಕಟ್ಟಡ ಕುಸಿತ: 1 ಸಾವು, ನಾಲ್ವರಿಗೆ ಗಾಯ
ಬೆಂಗಳೂರಿನಲ್ಲಿ 2 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಓರ್ವ ಮಹಿಳೆ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು: ಬೆಂಗಳೂರಿನಲ್ಲಿ 2 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಓರ್ವ ಮಹಿಳೆ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನ ಲಿಂಗರಾಜಪುರದ ಮೇಲ್ಸೇತುವೆ ಪಕ್ಕದಲ್ಲಿ ಕಟ್ಟಡ ಕುಸಿತವಾಗಿದ್ದು, ಘಟನೆಯಲ್ಲಿ 65 ವರ್ಷದ ಜಯಮೇರಿ ಎಂಬ ಮಹಿಳೆ ಸಾವಿಗೀಡಾಗಿದ್ದಾರೆ. ಅಲ್ಲದೆ ಘಟನೆಯಲ್ಲಿ ಮತ್ತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಭೇಟಿ ನೀಡಿದ್ದು, ಮೃತರಿಗೆ 3 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 25 ಸಾವಿರ ರುಪಾಯಿಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೆ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಹೇಳಿದ್ದಾರೆ.
ಇದಕ್ಕೂ ಮೊದಲು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಬಿಬಿಎಂಪಿ ಅಧಿಕಾರಿಗಳು ಘಟನಾ ಸ್ಥಳವನ್ನು ಪರೀಕ್ಷಿಸಿದರು. ಈ ವೇಳೆ ಮೃತ ಜಯಮೇರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದರು. ಈ ಪರಿಹಾರ ಧನವನ್ನು ಗೃಹ ಸಚಿವರು 3 ಲಕ್ಷಕ್ಕೆ ಏರಿಕೆ ಮಾಡಿದ್ದಾರೆ. ಅಂತೆಯೇ ನಗರದಲ್ಲಿರುವ ಎಲ್ಲ ಹಳೆಯ ಕಟ್ಟಡಗಳನ್ನು ಪರಿಶೀಲಿಸಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿಗೆ ನೋಟಿಸ್ ನೀಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕಳೆದ 2 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮತ್ತಷ್ಟು ಹಾನಿಗೊಳಗಾಗಿದ್ದು, ಇಂದು ಸಂಜೆ ಕುಸಿತಗೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.