ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಕೇಂದ್ರ ಸಚಿವ ಅನಂತ್ ಕುಮಾರ್ ಪತ್ನಿ ವಿರುದ್ಧ ಎಫ್‌ಐಆರ್

ಬಸವೇಶ್ವರ ವಿದ್ಯಾವರ್ಧಕ ಸಂಘದ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Srinivasa Murthy VN
Updated On : 11 Sept 2014, 8:09 am

ಬಾಗಲಕೋಟೆ: ಶಿಕ್ಷಣ ಸಂಸ್ಥೆಯ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರ ವಿರುದ್ಧ ಬಾಗಲಕೋಟೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸದಾನಂದಗೌಡ ಅವರ ಬಳಿಕ ಮತ್ತೋರ್ವ ಬಿಜೆಪಿ ಪಕ್ಷದ ಸಚಿವರು ವಿವಾದಕ್ಕೀಡಾಗಿದ್ದು, ಬಸವೇಶ್ವರ ವಿದ್ಯಾವರ್ಧಕ ಸಂಘದ ಹಣವನ್ನು ದುರುಪಯೋಗ ಪಡಿಸಿಕೊಂಡ ಆರೋಪದ ಮೇರೆಗೆ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ತೇಜಸ್ವಿನಿ ಅವರು ಸದಸ್ಯರಾಗಿರುವ ಬಸವೇಶ್ವರ ವಿದ್ಯಾವರ್ಧಕ ಸಂಘದ ಹಣವನ್ನು ಅಕ್ರಮವಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಬಾಗಲಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಕರಣ ಕುರಿತಂತೆ ಜಿಲ್ಲಾ ಸತ್ರ ನ್ಯಾಯಾಲಯ ವಿವರ ಕೋರಿ ತೇಜಸ್ವಿನಿ ಮತ್ತು ಟ್ರಸ್ಟ್‌ನ ಅಧ್ಯಕ್ಷರಿಗೆ ಈಗಾಗಲೇ ಸಮನ್ಸ್ ಜಾರಿ ಮಾಡಿದ್ದು, ಟ್ರಸ್ಟ್‌ನ ಜುಲೈ ತಿಂಗಳ ಆರ್ಥಿಕ ವ್ಯವಹಾರಗಳ ಕುರಿತು ವಿವರ ನೀಡುವಂತೆ ಆದೇಶಿಸಿದೆ.

ಏನಿದು ಪ್ರಕರಣ?
ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರು ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಘದ ಸದಸ್ಯರಾಗಿದ್ದು, ಸಂಘದ ಅಧ್ಯಕ್ಷರೊಂದಿಗೆ ಸೇರಿ ಟ್ರಸ್ಟ್‌ನ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಬಸವೇಶ್ವರ ವಿದ್ಯಾವರ್ಧಕ ಸಂಘದ ಮಾಜಿ ಸದಸ್ಯರಾದ ಮಲ್ಲಣ್ಣ ಜಿಗಳೂರು ಅವರು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಘದ ಅಧ್ಯಕ್ಷರು ಸೇರಿದಂತೆ ಇತರೆ ನಾಲ್ಕು ಮಂದಿ ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ನಾಲ್ಕು ಮಂದಿಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರು ಕೂಡ ಸೇರಿದ್ದಾರೆ ಎನ್ನಲಾಗುತ್ತಿದೆ.

ಆರೋಪ ಅಲ್ಲಗಳೆದ ತೇಜಸ್ವಿನಿ ಅನಂತ್ ಕುಮಾರ್
ಇನ್ನು ತಮ್ಮ ವಿರುದ್ಧದ ಆರೋಪವನ್ನು ಅಲ್ಲಗಳೆದಿರುವ ತೇಜಸ್ವಿನಿ ಅವರು, ತಾವು ಯಾವುದೇ ಹಣವನ್ನು ದುರುಪಯೋಗಪಡಿಸಿಕೊಂಡಿಲ್ಲ. ತಮ್ಮ ಮೇಲಿನ ಆರೋಪದ ಬಗ್ಗೆ ತಮಗೇನು ತಿಳಿದಿಲ್ಲ. ಅಲ್ಲದೆ ಈ ಸಂಬಂಧ ತಮಗೆ ನ್ಯಾಯಾಲಯದಿಂದ ಯಾವುದೇ ರೀತಿಯ ಸಮನ್ಸ್ ಕೂಡ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅನಂತ್ ಕುಮಾರ್ ರಾಜಿನಾಮೆಗೆ ಆಗ್ರಹ
ಈ ನಡುವೆ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರು ಶಿಕ್ಷಣ ಸಂಸ್ಥೆಯ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಯೂತ್ ಕಾಂಗ್ರೆಸ್ ಘಟಕದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ಅಲ್ಲದೆ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ನೈತಿಕ ಹೊಣೆಹೊತ್ತು ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಒಟ್ಟಾರೆ ಸದಾನಂದಗೌಡ ಅವರ ಮಗನ ವಿವಾ(ಹ)ದ ಪ್ರಕರಣ ಹಸಿರಾಗಿರುವಾಗಲೇ, ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರ ಮೇಲಿನ ಹಣ ದುರುಪಯೋಗ ಆರೋಪ ಮತ್ತೆ ಬಿಜೆಪಿ ಪಕ್ಷಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement