ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೂಗುಚ್ಛ ನೀಡಿ ಸ್ವಾಗತ ಕೋರಿದರು.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೂಗುಚ್ಛ ನೀಡಿ ಸ್ವಾಗತ ಕೋರಿದರು.
ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿರುವ ನರೇಂದ್ರ ಮೋದಿ ಅವರು ಭಾರತೀಯ ವಾಯು ಸೇನೆಗೆ ಸೇರಿದ ವಿಶೇಷ ವಿಮಾನದಲ್ಲಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರನ್ನು ರಾಜ್ಯಪಾಲರಾದ ವಿ.ಆರ್.ವಾಲಾ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ವಿವಿಧ ನಾಯಕರು ಸ್ವಾಗತಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿ ಅವರಿಗೆ ರೇಷ್ಮೆ ಶಾಲು ಹೋದಿಸಿ, ಮೈಸೂರು ಪೇಟೆ ತೋಡಿಸುವ ಮೂಲಕ ಸ್ವಾಗತ ಕೋರಿದರು.
ಈ ವೇಳೆ ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತಕುಮಾರ್ ಸೇರಿದಂತೆ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಮೇಯರ್ ಶಾಂತಕುಮಾರಿ, ರಾಜ್ಯ ಬಿಜೆಪಿ ಹಿರಿಯ ಮುಖಂಡರಾದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಸುರೇಶ್ ಕುಮಾರ್, ಬಿ.ಶ್ರೀರಾಮುಲು, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.