ಬೆಂಗಳೂರು: ಇತ್ತೀಚೆಗಷ್ಟೇ ಕಾಡುಗೋಡಿಯ ಪ್ರಗತಿ ಕಾಲೇಜು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಗೌತಮಿ ಮೇಲಿನ ಶೂಟೌಟ್ ಪ್ರಕರಣ ಇನ್ನು ಹಸಿ ಇರುವಾಗಲೇ, ನಗರದ ಹೆಗ್ಗನಹಳ್ಳಿಯಲ್ಲಿರುವ ಆರ್ ಇಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿ ಮೇಲೆ ಕೊಡಲಿಯಿಂದ ತೀವ್ರವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಹೆಗ್ಗನಹಳ್ಳಿ ಮುಖ್ಯರಸ್ತೆಯಲ್ಲಿರುವ ಆರ್ ಇಎಸ್ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲೇ ಅಂತಿಮ ವರ್ಷದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ರಾಜಗೋಪಾಲನಗರ ನಿವಾಸಿ ಯೋಗೇಶ್ ತನ್ನ ಸಹ ವಿದ್ಯಾರ್ಥಿನಿ ಮೇಲೆ ಬೆಳಗ್ಗೆ 9.30ರ ಸುಮಾರಿನಲ್ಲಿ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಆ ಕೂಡಲೇ ಅಲ್ಲೆ ಇದ್ದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಯೋಗೇಶ್ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಹಲ್ಲೆಗೆ ತುತ್ತಾಗಿದ್ದ ವಿದ್ಯಾರ್ಥಿನಿಯನ್ನು ಸದ್ಯ ಹೆಗ್ಗನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎನ್ನಲಾಗಿದೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪಶ್ಚಿಮ ಡಿಸಿಪಿ ಲಾಬುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.