ಬೆಂಗಳೂರು: ಒಂದರಿಂದ ಏಳನೇ ತರಗತಿವರೆಗೂ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಅನುಮತಿಯನ್ನು ಪರಿಗಣಿಸುತ್ತಿಲ್ಲ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ.
ಒಂದರಿಂದ ಏಳನೇ ತರಗತಿ ವರೆಗೂ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಅನುಮತಿ ಕೋರಿ ಶಿಕ್ಷಣ ಇಲಾಖೆಗೆ ಅರ್ಜಿ ಸಲ್ಲಿಸಿದರೂ ಇಲಾಖೆ ಪರಿಗಣಿಸುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿತ್ತು.
ಇದರ ವಿಚಾರನೆ ನಡೆಸಿದ ನ್ಯಾ.ಎನ್.ಕುಮಾರ್ ಮತ್ತು ನ್ಯಾ.ಜಿ ನರೇಂದರ್ ಅವರಿದ್ದ ವಿಭಾಗೀಯ ಪೀಠ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ನೊಟೀಸ್ ಜಾರಿ ಮಾಡಿದೆ. ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ಎತ್ತಿ ಹಿಡಿದಿದೆ ಹೀಗಾಗಿ ಸಂಬಂಧಪಟ್ಟವರ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.