ಬೆಂಗಳೂರು: ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಅವರ 75ನೇ ವರ್ಷದ ಜನ್ಮದಿನವನ್ನು ಡಿ.18ರಂದು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಕೃಷಿ ಮತ್ತು ರಕ್ಷಣಾ ಸಚಿವರಾಗಿದ್ದ ಸಮಯದಲ್ಲಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ಹಿರಿಯ ರಾಜಕೀಯ ಮುತ್ಸದ್ಧಿಯಾಗಿದ್ದು 75ನೇವರ್ಷಕ್ಕೆಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾರಂಭ ಹಮ್ಮಿ ಕೊಳ್ಳಲಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಗಳಾದ ಬಿ.ಎಸ್. ಯಡಿಯೂರಪ್ಪ, ಧರ್ಮ ಸಿಂಗ್, ಸಚಿವ ಆರ್.ವಿ. ದೇಶಪಾಂಡೆ, ಮತ್ತಿತರ ರಾಜಕೀಯ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.
ಜನತಾ ಪರಿವಾರದಿಂದ ಆಹ್ವಾನ ಬಂದಿಲ್ಲ
ಬಿಹಾರದಲ್ಲಿ ಎರಡು ದೊಡ್ಡ ರಾಜಕೀಯ ಪಕ್ಷಗಳು ಒಂದಾಗಿ ಅಧಿಕ್ಕಾರಕ್ಕೇರಿರುವ ಬೆನ್ನಲ್ಲೇ ರಾಜ್ಯದಲ್ಲಿ ಜನತಾ ಪರಿವಾರ ಒಗ್ಗೂಡುತ್ತಿದೆ. ಈ ಹಿನ್ನೆಲೆಯಲ್ಲಿ ಜನತಾ ಪರಿವಾರ ಕುರಿತು ನಿಮ್ಮ ನಿಲುವೇನು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಂಧ್ಯ ಅವರು ನನಗೆ ಈವರೆಗೆ ಯಾರೂ ಆಹ್ವಾನ ನೀಡಿಲ್ಲ. ಸದ್ಯ ಸ್ಕೌಟ್ ಮತ್ತು ಗೈಡ್ಸ್‍ನಲ್ಲಿ ತೊಡಗಿಸಿಕೊಂಡಿದ್ದು, ಮುಂದಿನ ಒಂದು ವರ್ಷ ಪಕ್ಷ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಿಲ್ಲ ಒಂದು ವರ್ಷದ ನಂತರ ರಾಜಕೀಯದ ಬಗ್ಗೆ ವಿಚಾರ ಮಾಡೋಣ ಎಂದರು.