ಜಿಲ್ಲಾ ಸುದ್ದಿ

ಜ.2ಕ್ಕೆ ಕಾರ್ಮಿಕರ ಸಮಾವೇಶ

Srinivas Rao BV

ಬೆಂಗಳೂರು: ನಗರದ ಬಾಷ್ ಕಂಪನಿಯಲ್ಲಿ ಕಳೆದ 9 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ 263 ಮಂದಿ ಹಂಗಾಮಿ ಕಾರ್ಮಿಕರನ್ನು ವಜಾಗೊಳಿಸಿರುವುದನ್ನು ಖಂಡಿಸಿ ಜ.2ರಂದು ಪುರಭವನದ ಎದುರು ಜಂಟಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ಮುಖಂಡ ಅನಂತ ಸುಬ್ಬರಾವ್ ತಿಳಿಸಿದ್ದಾರೆ.
ಜ.2ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಸಮಾವೇಶ ನಡೆಯಲಿದ್ದು, ಬಾಷ್ ಕಂಪನಿಯ ಹಂಗಾಮಿ ಕಾರ್ಮಿಕರ ಮುಂದಿನ ಹೋರಾಟದ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಯಲಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸಮಾವೇಶಕ್ಕೆ ಚಾಲನೆ ನೀಡಲಿದ್ದು, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಎಲ್. ಹನುಮಂತಯ್ಯ, ಚಿತ್ರನಟ ಡಾ.ಶಿವರಾಜಕುಮಾರ್ ಸೇರಿದಂತೆ ಸಾವಿರಕ್ಕೂ ಹೆಚ್ಚು ಕಾರ್ಮಿಕ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಬಾಷ್ ಕಂಪನಿಯ ಕ್ರಮ ಖಂಡಿಸಿ ಹಂಗಾಮಿ ಕಾರ್ಮಿಕರು ಕಳೆದ 4 ತಿಂಗಳಿನಿಂದ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಮುಂದಾಗಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಕಾರ್ಮಿಕ ಇಲಾಖೆಯ ಸಚಿವರನ್ನು ಭೇಟಿ ಮಾಡಿದರೂ ಯಾವುದೇ ಪ್ರಯೋಜನ ವಾಗಿಲ್ಲ. ಹೀಗಾಗಿ ಸಮಾವೇಶ ನಡೆಸಿ ಮುಂದಿನ ಹೋರಾಟ ಗಳನ್ನು ರೂಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

SCROLL FOR NEXT