ಬೆಂಗಳೂರು: ರಾಜ್ಯದಲ್ಲಿ 1ರಿಂದ 5 ನೇ ತರಗತಿವರೆಗಿನ ಇಂಗ್ಲಿಷ್ ಮಾಧ್ಯಮ ಶಾಲೆಗಳ ಆರಂಭಕ್ಕೆ ಅನುಮತಿ ನೀಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.
ಇದರಿಂದ ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲೇ ಪ್ರಾಥಮಿಕ ಶಿಕ್ಷಣ ನೀಡಬೇಕೆಂಬ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ. ಪೋಷಕರು ಹಾಗೂ ಮಕ್ಕಳಲ್ಲಿದ್ದ ಗೊಂದಲ ಸದ್ಯಕ್ಕೆ ನಿವಾರಣೆಯಾದಂತಾಗಿದೆ. 1ರಿಂದ 5ನೇ ತರಗತಿವರೆಗೆ ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡಬೇಕೆಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಖಾಸಗಿ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಸಂಯೋಜನಾ ಸಂಸ್ಥೆ ಹೈಕೋರ್ಟ್‍ನಲ್ಲಿ ಅರ್ಜಿ ದಾಖಲಿಸಿತ್ತು.
ವಿಚಾರಣೆ ನಡೆಸಿದ ನ್ಯಾ.ಬಿ.ವಿ.ನಾಗರತ್ನ ಅವರ ಪೀಠ, ರಾಜ್ಯದಲ್ಲಿ 1994ರಿಂದ ಕನ್ನಡ ಮಾಧ್ಯಮಕ್ಕೆ ಅನುಮತಿ ಪಡೆದು ಆಂಗ್ಲ ಮಾಧ್ಯಮದಲ್ಲಿ ಶಾಲೆ ನಡೆಸುತ್ತಿರುವ ಅನಧಿಕೃತ ಶಿಕ್ಷಣ ಸಂಸ್ಥೆಗಳಿಗೆ ಆಂಗ್ಲ ಮಾಧ್ಯಮದಲ್ಲೇ ಶಿಕ್ಷಣ ನೀಡಲು ಅನುಮತಿ ಕಲ್ಪಿಸುವಂತೆ ಮಹತ್ವದ ಮಧ್ಯಂತರ ಆದೇಶ ಹೊರಡಿ ಸಿದೆ. ಅಲ್ಲದೇ ಹೊಸದಾಗಿ ಶಾಲೆಗಳ ಆರಂಭಕ್ಕೆ ಅನುಮತಿ ಕೋರಿರುವ ಅರ್ಜಿಗಳನ್ನು ಮಾ.31ರೊಳಗೆ ಇತ್ಯರ್ಥ ಪಡಿಸುವಂತೆ ಆದೇಶಿಸಿದೆ.
ಸರ್ಕಾರದ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಸಂವಿಧಾನದ ಪ್ರಕಾರ ಶಿಕ್ಷಣ ಮಾಧ್ಯಮವನ್ನು ಆಯ್ಕೆ ಮಾಡಿಕೊಳ್ಳುವುದು ಮಕ್ಕಳ ಹಾಗೂ ಪಾಲಕರ ಮೂಲಭೂತ ಹಕ್ಕು. ಇದನ್ನು ಸುಪ್ರೀಂ ಕೋರ್ಟ್ ಸಹ ತನ್ನ ಆದೇಶದಲ್ಲಿ ತಿಳಿಸಿದೆ. ಭಾಷಾ ಮಾಧ್ಯಮ ವಿಚಾರದಲ್ಲಿ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಬೇಕು. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಪೋಷಕರು ಗೊಂದಲಕ್ಕೀಡಾಗಿದ್ದಾರೆ. ಈ ಮಧ್ಯೆ ಸರ್ಕಾರ ಹೊಸದಾಗಿ ನೀತಿ ನಿರ್ಧಾರ ರೂಪಿಸುವುದಾಗಿ ಹೇಳಿಕೆ ನೀಡುತ್ತಿ ರುವುದು ಈ ಹಂತದಲ್ಲಿ ಸರಿಯಲ್ಲ. ಅಲ್ಲದೇ ಸರ್ಕಾರ ಯಾವ ರೀತಿ ನೀತಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದು ಅರ್ಥವಾಗುತ್ತಿಲ್ಲ. ಸರ್ಕಾರದ ಈ ನಿರ್ಧಾರ ನ್ಯಾಯಂಗ ನಿಂಧನೆಗೆ ಒಳಪಡುತ್ತದೆ ಎಂದು ಆದೇಶದಲ್ಲಿ ಎಚ್ಚರಿಸಿದೆ. ಸರ್ಕಾರ ಈ ರೀತಿ ವರ್ತಿಸುತ್ತಿರುವುದು ಸರಿಯಲ್ಲ ಎಂದು ಪೀಠ ಬೇಸರ ವ್ಯಕ್ತಪಡಿಸಿದೆ.
ವಿಚಾರಣೆ ವೇಳೆ ಸರ್ಕಾರದ ಪರ ಅಡ್ವೊಕೇಟ್ ಜನರಲ್ ವಾದ ಮಂಡಿಸಿ, ಭಾಷಾ ಮಾಧ್ಯಮದ ವಿಚಾರದಲ್ಲಿ ಸರ್ಕಾರ ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭದ ಒಳಗಾಗಿ ನಿರ್ಧಾರ ತೆಗೆದುಕೊಳ್ಳುತ್ತದೆ. ಸುಪ್ರೀಂಕೋರ್ಟ್ ನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಲಾಗಿದೆ. ಮಾತೃಭಾಷೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಸಂವಿಧಾನ ತಿದ್ದುಪಡಿಗೂ ಕೇಂದ್ರಕ್ಕೆ ಕೋರಲಾಗಿದೆ ಎಂದು ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸದ್ಯ 1-5ನೇ ತರಗತಿವರೆಗೂ ಇಂಗ್ಲಿಷ್ ಭಾಷೆ ಬೋಧನೆಗೆ ಮಧ್ಯಂತರ ಆದೇಶ ನೀಡಿದ್ದು, ಸುಪ್ರೀಂಕೋರ್ಟ್‍ನ ಪರಿಹಾರಾತ್ಮಕ ಅರ್ಜಿಗೆ ಅಂತಿಮ ಆದೇಶ ಬದ್ಧವಾಗಿರಬೇಕು ಎಂದು ತನ್ನ ಆದೇಶದಲ್ಲಿ ಸ್ಪಷ್ಟ ಪಡಿಸಿದೆ. ಇದು ಮಾತೃಭಾಷೆ ಅಥವಾ ಇಂಗ್ಲಿಷ್ ಪರ ವಿರೋಧ ಎಂಬ ಕುರಿತಾದ ಪ್ರಕರಣವಲ್ಲ. ಸುಪ್ರೀಂ ಕೋರ್ಟ್ ಆದೇಶಕ್ಕೆ ಸರ್ಕಾರ ಹಾಗೂ ಹೈಕೋರ್ಟ್ ಬದ್ಧವಾಗಿರಬೇಕು. ಇದು ಸೂಕ್ಷ್ಮ ವಿಚಾರವಾಗಿದ್ದು, ಇದರಲ್ಲಿ ಮಕ್ಕಳ ಭವಿಷ್ಯ ಅಡಗಿದೆ.
- ಹೈಕೋರ್ಟ್