ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನಿಗದಿತ ಅವಧಿಯಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಸಾರಿಗೆ ಮತ್ತು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ಗುರುವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಬಿಎಂಪಿ ಚುನಾವಣೆಯನ್ನು ಮುಂದೂಡುವ ಯತ್ನ ಯಾರಿಂದಲೂ ನಡೆಯುತ್ತಿಲ್ಲ. ನಿಗದಿತ ಅವಧಿಯಲ್ಲಿ ಚುನಾವಣೆ ನಡೆಯುವುದಿಲ್ಲ ಎನ್ನುವುದು ಊಹಾಪೋ ಹದ ಮಾತು. ಚುನಾವಣೆ ಪ್ರಕ್ರಿಯೆ ಮುಂದುವರಿಸುವ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಬಿಬಿಎಂಪಿ ವಿಭಜನೆಯ ವಿಚಾರ ಚುನಾವಣೆಗೆ ತೊಡಕಾಗುವುದಿಲ್ಲ. ವಿಭಜನೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಿತಿ ನೇಮಿಸಲಾಗಿದೆ. ಆ ಸಮಿತಿ ವರದಿ ನೀಡಿದ ನಂತರ ವಿಭಜನೆಗೆ ಸಂಬಂಧಿಸಿದಂತೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಆದರೆ, ನಿಗದಿತ ಅವಧಿಯಲ್ಲಿ ಬಿಬಿಎಂಪಿಯ ಎಲ್ಲ 198ವಾರ್ಡ್‍ಗಳಿಗೂ ಚುನಾವಣೆ ನಡೆಯುವುದು ಖಚಿತವಾಗಿದೆ ಎಂದುತಿಳಿಸಿದರು. ಇದೇ ವೇಳೆ, ಕಾಂಗ್ರೆಸ್ ಕಚೇರಿಗೆ ಗೃಹ ಸಚಿವ ಕೆ.ಜೆ. ಜಾರ್ಜ್ ಕೂಡ ಭೇಟಿ ನೀಡಿ, ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು.