ಜಿಲ್ಲಾ ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರ ನಿರಶನ

ಬೆಂಗಳೂರು: ನಾನಾ ಬೇಡಿಕೆ ಈಡೇರಿಸುವಂತೆ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರದಿಂದ ಅಮರಣಾಂತ ನಿರಶನ ಹಮ್ಮಿಕೊಂಡಿದ್ದಾರೆ.

ಬೇಡಿಕೆ ಈಡೇರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದು, ಕೊಟ್ಟ ಮಾತಿಗೆ ತಪ್ಪಿದ್ದಾರೆ. ಹಾಗಾಗಿ ನಿರಶನ, ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದ್ದು, ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಸಿಐಟಿಯು ಅಧ್ಯಕ್ಷೆ ಎಸ್.ವರಲಕ್ಷ್ಮಿ ಮಾತನಾಡಿ, ಈ ಹಿಂದೆ ಫೆಬ್ರವರಿ ತಿಂಗಳಲ್ಲಿ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದಾಗ ಮುಖ್ಯಮಂತ್ರಿ  ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವ ಹಾಗೂ ಉಳಿದ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಭರವಸೆ ಉಳಿಸಿಕೊಳ್ಳುವಲ್ಲಿ ಸಿಎಂ ವಿಫಲರಾಗಿದ್ದಾರೆ.ಇದರಿಂದ ಕಾರ್ಯ ಕರ್ತೆಯರಿಗೆ ಸಾಕಷ್ಟು ತೊಂದರೆಯಾಗಿದೆ. ಈ ಹಿನ್ನೆಲೆ ಯಲ್ಲಿ ಮತ್ತೆ ಪ್ರತಿಭಟನೆ ಆರಂಭಿಸಲಾಗಿದೆ.

ನ್ಯಾಯ ಸಿಗುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ. ಎರಡು ದಿನ ಪ್ರತಿಭಟನೆ ನಡೆಸಿದರೂ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಸಮಸ್ಯೆ ಆಲಿಸಿಲ್ಲ. ಹಾಗಾಗಿ ಆಮರಣಾಂತ ನಿರಶನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ 23 ಮಂದಿ ನಿರಶನ ನಡೆಸುತ್ತಿದ್ದಾರೆ.

SCROLL FOR NEXT