ತುಮಕೂರು: ನಡೆದಾಡುವ ದೇವರು ಎಂದೇ ಖ್ಯಾತಿ ಹೊಂದಿರುವ ಪದ್ಮವಿಭೂಷಣ ಡಾ. ಶ್ರೀ ಶಿವಕುಮಾರಸ್ವಾಮೀಜಿ 108ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ಈ ಹಿನ್ನಲೆಯಲ್ಲಿ ತುಮಕೂರು ಸೇರಿದಂತೆ ರಾಜ್ಯದ ಹಲವೆಡೆ ಸ್ವಾಮೀಜಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದೆ. ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಅನೇಕ ಭಕ್ತಾದಿಗಳು ಸಿದ್ಧಗಂಗಾ ಮಠಕ್ಕೆ ತೆರಳಿ, ಸ್ವಾಮೀಜಿ ಅವರ ಆರ್ಶೀವಾದಿ ಪಡೆಯುತ್ತಿದ್ದಾರೆ.
ಅಲ್ಲದೇ ರಾಜ್ಯದ ವಿವಿಧ ಮಠಗಳಿಂದ ಮಠಾಧೀಶರು ಸ್ವಾಮೀಜಿ ಅವರನ್ನು ಭೇಟಿ ಮಾಡಿ ಮಾಲಾರ್ಪಣೆ ಮಾಡಿ, ಅವರ ಸಾಧನೆಗೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ನಗರದ ಹೊರಭಾಗದಲ್ಲಿರುವ ಶ್ರೀ ಸಿದ್ದಗಂಗಾ ಮಠದ ಆವರಣದಲ್ಲಿ ಸಾಂಕೇತಿಕವಾಗಿ ಶ್ರೀಗಳ ಹುಟ್ಟುಹಬ್ಬ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಾಹಿತಿಗಳು, ಲೇಖಕರು, ಚಿಂತಕರು ಮಠಕ್ಕೆ ಭೇಟಿ ನೀಡಿ ಶುಭಕೋರುತ್ತಿದ್ದು, ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 10 ಸಾವಿರ ವಿದ್ಯಾರ್ಥಿಗಳ ಪೋಷಕರೂ ಸಹ ಮಠಕ್ಕೆ ಆಗಮಿಸುತ್ತಿದ್ದಾರೆ.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಭಕ್ತಾದಿಗಳಿಂದ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಠದ ಆವರಣದಲ್ಲೂ ಸಹ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಮಠಕ್ಕೆ ಆಗಮಿಸುವ ಭಕ್ತಾದಿಗಳಿಗಾಗಿ ದಾಸೋಹದ ವ್ಯವಸ್ಥೆಯನ್ನೂ ಮಾಡಲಾಗಿದೆ.