ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಹಿಂಭಾಗದಲ್ಲಿ ಉದ್ದೇಶಿತ 323 ಅಡಿ ಎತ್ತರದ ಬೃಹತ್ ಬಸವಮೂರ್ತಿ ಪ್ರತಿಷ್ಠಾಪನೆಗೆ ಮುಂಗಡ ಪತ್ರದಲ್ಲಿ ಕಾಯ್ದಿರಿಸಲಾಗಿದ್ದ ರು.10 ಕೋಟಿ ಅನುದಾನ ಬಿಡುಗಡೆ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ತುಮಕೂರಿನ ಪಿ.ಎಸ್. ಪ್ರಕಾಶ್ ಅಲಿಯಾಸ್ ಪಂಚಿ ಹಾಗೂ ಚಿತ್ರದುರ್ಗ ತಾಲ್ಲೂಕಿನ ನಂದಿಪುರ ಗ್ರಾಮದ ಸಿ.ಬಿ. ನಾಗರಾಜ್ ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಹಾಗೂ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.
`ಅರ್ಜಿದಾರರು ಈಗಾಗಲೇ ಶ್ರೀಮಠದ ವಿರುದ್ಧ ಅನೇಕ ವ್ಯಾಜ್ಯಗಳಲ್ಲಿ ಭಾಗಿಯಾಗಿದ್ದಾರೆ ಮತ್ತು ಇದರಲ್ಲಿ ಅವರ ವೈಯಕ್ತಿಕ ಹಿತಾಸಕ್ತಿ ಅಡಗಿದೆ. ಹೀಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇದಕ್ಕೆ ವೇದಿಕೆಯಾಗಿ ಬಳಸಿಕೊಂಡಿದ್ದಾರೆ. ಆದ್ದರಿಂದ ಈ ಅರ್ಜಿಯನ್ನು ವಜಾ ಮಾಡಲಾಗುತ್ತಿದೆ' ಎಂದು ಪೀಠ ಆದೇಶದಲ್ಲಿ ವಿವರಿಸಿದೆ.