ಬೆಂಗಳೂರು: ಆಳುವ ವರ್ಗದವರನ್ನು ಕುಂಭಕರ್ಣ ನಿದ್ದೆಯಿಂದ ಎಬ್ಬಿಸಲು ಜೀವಜಲಕ್ಕಾಗಿ ಉತ್ತರ ಕರ್ನಾಟಕದ ಜನರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ 3ನೇ ದಿನಕ್ಕೆ ಕಾಲಿಟ್ಟಿದೆ.ಶನಿವಾರದ ಪ್ರತಿಭಟನೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಪಾಲ್ಗೊಳ್ಳುವ ಮೂಲಕ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದರು.
ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ದೊರೆಸ್ವಾಮಿ ಮಾತನಾಡಿ, ಸ್ವಾತಂತ್ರ್ಯ ಬಂದು 70 ವರ್ಷ ಕಳೆದರು ಕುಡಿಯುವ ನೀರಿಗೆ ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ದುರಂತವಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜಕಾರಣವನ್ನು ಬದಿಗಿಟ್ಟು ಉತ್ತರ ಕರ್ನಾಟಕ ಭಾಗದ ನೀರಿನ ಸಮಸ್ಯೆ ಅರಿತು ಮೂರೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆಸಿ ಸಂಧಾನ ನಡೆಸುವ ಮುಖಾಂತರ ಕಳಸಾ ಬಂಡೂರಿ ಯೋಜನೆ ಜಾರಿಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಧಾನಿ ಅವರ ಮೇಲೆ ರಾಜ್ಯ ಸಂಸದರು ಮತ್ತು ಸರ್ವಪಕ್ಷಗಳ ನಾಯಕರು ಯೋಜನೆ ಜಾರಿಗೊಳಿಸುವಂತೆ ಒತ್ತಡ ಹಾಕಬೇಕು. ಮೋದಿ ಅವರು ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆದು ಸಂದಾನದ ಮೂಲಕ ಸಮಸ್ಯೆ ಬಗೆಹರಿಸಿ ಯೋಜನೆ ಜಾರಿಗೆ ಕ್ರಮಕೈಗೊಳ್ಳಬೇಕು ಎಂದು ಹೇಳಿದರು. ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಡಾ. ಸಿದ್ದರಾಮ ಸ್ವಾಮೀಜಿ ಮಾತನಾಡಿ, ಕಳೆದ 136 ದಿನದಿಂದ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧಡೆ ಹೋರಾಟ ನಡೆಸಲಾಗುತ್ತಿದೆ. ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಸಮಸ್ಯೆ ಬಗೆಹರಿಸುತ್ತಿಲ್ಲ. ಹೀಗಾಗಿ ಉಗ್ರ ಚಳವಳಿ ನಡೆಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೋರಾಟದ ಸ್ವರೂಪ ಇನ್ನಷ್ಟು ತೀವ್ರ ಗೊಳ್ಳಬೇಕು ಎಂದು ಹೇಳಿದರು. ಜಯ ಕರ್ನಾಟಕ ಸಂಘಟನೆ ಹಾಗೂ ರೈತ ಸೇನಾ ಕಾರ್ಯಕರ್ತರು, ಉತ್ತರ ಕರ್ನಾಟಕ ನವನಿರ್ಮಾಣ ವೇದಿಕೆ, ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿರೆಡ್ಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.