ಜಿಲ್ಲಾ ಸುದ್ದಿ

ಕಳಸಾ ಬಂಡೂರಿ ಯೋಜನೆ ಹೋರಾಟದ ಹಿನ್ನೆಲೆ

Shilpa D

ಕಳೆದ 59 ದಿನಗಳಿಂದ ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಕಳಸಾ-ಬಂಡೂರಿ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಳಸಾ ಬಂಡೂರಿ ಯೋಜನೆಗೆ ಕನ್ನಡ ಚಿತ್ರರಂಗ ಸೇರಿ ಹಲವು ಕನ್ನಡ ಪರ ಸಂಘಟನೆಗಳು ವ್ಯಾಪಕ ಬೆಂಬಲ ಸೂಚಿಸಿವೆ. ಈ ಯೋಜನೆ ಮಹತ್ವ, ಹೋರಾಟದ ಹಿನ್ನೆಲೆಯ ಬಗ್ಗೆ ಒಂದಿಷ್ಟು ಡಿಟೈಲ್ಸ್ ಇಲ್ಲಿದೆ.

ಮಹಾದಾಯಿ ನದಿಯನ್ನು ಗೋವಾದ ಜೀವನದಿ ಎಂದು ಕರೆಯುತ್ತಾರೆ. ಸುಮಾರು 77 ಕಿ.ಮೀ. ಇರುವ ಈ ನದಿಯು ಕರ್ನಾಟಕದಲ್ಲಿ ಸುಮಾರು 29 ಕಿ.ಮೀ.ಹರಿಯುತ್ತದೆ. ರಾಜ್ಯದ ಬೆಳಗಾವಿಯ ಮೂಲಕ ಹರಿದು ಸಮುದ್ರ ಸೇರಿಕೊಳ್ಳುತ್ತದೆ ಈ ನದಿ. ಕರ್ನಾಟಕದ ಮೂಲಕ ಹರಿದು ಹೋಗುವ ನೀರನ್ನು ಮಲಪ್ರಭಾ ಡ್ಯಾಂನಲ್ಲಿ ಸಂಗ್ರಹಿಸಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದೇ ಮಹಾದಾಯಿ ಅಥವ ಕಳಸಾ-ಬಂಡೂರಿ ಯೋಜನೆ

ಈ ನೀರನ್ನು ಕಳಸಾ-ಬಂಡೂರಿ ಎಂಬ ಎರಡು ನಾಲೆಗಳ ಮೂಲಕ ಜಲಾಶಯಕ್ಕೆ ಹರಿಸಲು ಯೋಜನೆ ರೂಪಿಸಲಾಗಿದೆ. ಆದ್ದರಿಂದ, ಕಳಸಾ-ಬಂಡೂರಿ ಎಂಬ ಹೆಸರೂ ಇದೆ. 1978ರಲ್ಲಿ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಕುಡಿಯುವ ನೀರಿಗಾಗಿ ಬಳಸಿಕೊಳ್ಳುವ ಚಿಂತನೆ ಆರಂಭವಾಯಿತು. ಆಗ ಮುಖ್ಯಮಂತ್ರಿಯಾಗಿದ್ದ ಆರ್.ಗುಂಡೂರಾವ್ ಅವರು ಎಸ್.ಆರ್.ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ನೀಡುವಂತೆ ಸೂಚಿಸಿದರು. 1980ರಲ್ಲಿ ವರದಿ ನೀಡಿದ ಸಮಿತಿ ಯೋಜನೆಯನ್ನು ಜಾರಿಗೊಳಿಸಬಹುದು ಎಂದು ಸರ್ಕಾರಕ್ಕೆ ಶಿಫಾರಸು ಮಾಡಿತು. ಕರ್ನಾಟಕ ಸರ್ಕಾರ 1988ರಲ್ಲಿ ಯೋಜನೆಗೆ ಒಪ್ಪಿಗೆ ನೀಡಿತು. ಆದರೆ, ಗೋವಾ ಸರ್ಕಾರ ವಿರೋಧ ವ್ಯಕ್ತಪಡಿಸಿತು.

ಮಹಾದಾಯಿ ಯೋಜನೆಯ ವರದಿ ನೀಡಿದ್ದ ಸಮಿತಿಯಲ್ಲಿದ್ದ ಎಸ್‌.ಆರ್.ಬೊಮ್ಮಾಯಿ ಅವರು 1989ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಅಂದಿನ ಗೋವಾ ಸಿಎಂ ಪ್ರತಾಪ್ ಸಿಂಗ್ ರಾಣಾ ಜೊತೆ ಮಾತುಕತೆ ನಡೆಸಿದರು. ಆಗ ಯೋಜನೆಗೆ ಗೋವಾ ಒಪ್ಪಿಗೆ ನೀಡಿತು. 2000ದಲ್ಲಿ ಕಳಸಾ-ಬಂಡೂರಿ ನಾಲೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ ನೀಡಿತು. ಕಳಸಾ ಬಂಡೂರಿ ನಾಲಾ ಯೊಜನೆಗೆ 49.20 ಕೋಟಿ ರೂ.ಕಳಸಾ ನಾಲಾ ಯೋಜನೆಗೆ 44.78 ಕೋಟಿ ರೂ. ವೆಚ್ಚ ಮಾಡಲು ಆಡಳಿತಾತ್ಮಕ ಒಪ್ಪಿಗೆ ಸಿಕ್ಕಿತು.

ಆದರೆ, 2002ರ ಮೇನಲ್ಲಿ ಗೋವಾ ಸರ್ಕಾರ ಯೋಜನೆ ಬಗ್ಗೆ ತಕರಾರು ಎತ್ತಿತು. ಈ ನದಿ ವಿವಾದದ ಬಗ್ಗೆ ನ್ಯಾಯಾಧೀಕರಣ ರಚಿಸುವಂತೆ ಗೋವಾ ಸರ್ಕಾರ 2002ರಲ್ಲಿ ಕೇಂದ್ರ ಜಲಸಂಪನ್ಮೂಲ ಇಲಾಖೆಗೆ ಪತ್ರ ಬರೆಯಿತು. 2002ರ ಸೆಪ್ಟೆಂಬರ್‌ನಲ್ಲಿ ಯೋಜನೆಗೆ ಕೇಂದ್ರ ಜಲ ಆಯೋಗ ತಡೆ ನೀಡಿತು. ಬೆಳಗಾವಿಯ ಜಿಲ್ಲೆಯ ಕಣಕುಂಬಿಯಲ್ಲಿ ಜಲಾಶಯ ನಿರ್ಮಿಸಲು 2006ರ ಸೆಪ್ಟೆಂಬರ್‌ನಲ್ಲಿ ಭೂಮಿ ಪೂಜೆ ಮಾಡಲಾಯಿತು.

2006ರ ನವೆಂಬರ್‌ನಲ್ಲಿ ಗೋವಾ ಸರ್ಕಾರ ಈ ಯೋಜನೆಗೆ ತಡೆ ನೀಡಬೇಕು ಎಂದು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತು. ಕಾಮಗಾರಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತು. 2010ರಲ್ಲಿ ಮಹದಾಯಿ ಜಲ ವಿವಾದ ನ್ಯಾಯಾಧೀಕರಣವನ್ನು ನೇಮಕ ಮಾಡಲಾಯಿತು. 2014ರಲ್ಲಿ ನ್ಯಾಯಾಧೀಕರಣದ ತಂಡ ಉತ್ತರ ಕರ್ನಾಟಕ ಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ವಿಚಾರಣೆಯನ್ನು ನವೆಂಬರ್ 23ಕ್ಕೆ ಮುಂದೂಡಿದೆ. ಆಗಸ್ಟ್ 2016ರೊಳಗೆ ನ್ಯಾಯಾಧಿಕರಣ ಅಂತಿಮ ತೀರ್ಪು ನೀಡಲಿದೆ.

SCROLL FOR NEXT