ಕಾರವಾರ: ಬೆಂಗಳೂರಿಗೆ ಆಗಮಿಸುತ್ತಿದ್ದ ತೈಲ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಶುಕ್ರವಾರ ತಡರಾತ್ರಿ ಕಾರವಾರದಲ್ಲಿ ನಡೆದಿದೆ.
ಕಾರವಾರದ ಚೆಂಡಿಯಾ ಚೆಕ್ ಪೋಸ್ಟ್ ಬಳಿ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಟ್ಯಾಂಕರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಟ್ಯಾಂಕರ್ ಪಲ್ಟಿಯಾಗುತ್ತಿದ್ದಂತೆಯೇ ಟ್ಯಾಂಕರ್ ನಿಂದ ತೈಲ ಸೋರಿಕೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಕೂಡಲೇ ಸ್ಥಳೀಯ ಪೊಲೀಸರಿಗೆ ವಿಷಯ ಮುಟ್ಟಿಸಿದರು. ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.
ಅಪಘಾತ ಸಂಭವಿಸಿದ್ದರಿಂದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 66ರಲ್ಲಿ ಸಂಚಾರ ವ್ಯತ್ಯಯ ಉಂಟಾಗಿತ್ತು. ಸುಮಾರು 2 ಗಂಟೆಗೂ ಅಧಿಕ ಕಾಲ ವಾಹನಗಳು ನಿಧಾನವಾಗಿ ಚಲಿಸಬೇಕಾಗಿ ಬಂತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.