ಶಿವಮೊಗ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಸಮೀಪ ಸಂಭವಿಸಿದೆ.
ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದು, ತೀರ್ಥಹಳ್ಳಿಯಲ್ಲಿ ಮದುವೆ ಮುಗಿಸಿಕೊಂಡು ತಮ್ಮ ಊರು ಭದ್ರಾವತಿ ಬಳಿಯ ಸಿದ್ದಾಪರುಕ್ಕೆ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಭಾಗ್ಯಮ್ಮ(45), ಕಮಲಮ್ಮ(53) ಹಾಗೂ ಶೇಷಣ್ಣ(55) ಎಂದು ಗುರುತಿಸಲಾಗಿದ್ದು, ಕಾರು ಚಾಲಕ ಮಲ್ಲಯ್ಯ ಹಾಗೂ ಜಯರಾಮ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.