"ಜಾತಿಹೀನನ ಮನೆಯ ಜ್ಯೋತಿ ತಾ ಹೀನವೆ ಜಾತಿ ವಿಜಾತಿ ಎನಬೇಡ ಶಿವನೊಲಿದಾತನೆ ಜಾತ ಸರ್ವಜ್ಞ"
"ಸರ್ವಜ್ಞ ನೆಂಬುವನು ಗರ್ವದಿಂದಾದವನೆ ಸರ್ವರೊಳಗೊಂದು ನುಡಿಗಲಿತು ವಿದ್ಯೆಯಾ ಪರ್ವತವೇ ಆದ ಸರ್ವಜ್ಞ"
"ಹರನೆಂಬ ದೈವ ನಮಗುಂಟು, ತಿರಿವರಿಂ ಸಿರಿವಂತರಾರು ಸರ್ವಜ್ಞ"
"ಮಂಡೆ ಬೋಳಿಸಿಕೊಂಡು ತುಂಡುಗಂಬಳಿ ಹೊದೆದು ಹಿಂಡನಗಲಿದ ಗಜದಂತೆ ಇಪ್ಪವನ ಕಂಡು ನಂಬುವುದು ಸರ್ವಜ್ಞ"
16ನೇ ಶತಮಾನದಲ್ಲಿ ಕರ್ನಾಟಕ ಕಂಡ ಒಬ್ಬ ಶ್ರೇಷ್ಠ ವಚನಕಾರ, ದಾರ್ಶನಿಕ ಕವಿ ಸರ್ವಜ್ಞನ ಜಯಂತಿ ಆಚರಣೆ ಮಾಡಲಾಗುತ್ತಿದೆ.
ಹಾವೇರಿ ಜಿಲ್ಲೆಯ ಅಬಲೂರು ಸರ್ವಜ್ಞನ ಜನ್ಮಸ್ಥಳ. ಜನರ ಆಡುಭಾಷೆಯಲ್ಲಿ ತ್ರಿಪದಿಗಳನ್ನು ರಚಿಸಿ ಸಮಾಜದ ಅಂಕುಡೊಂಕುಗಳನ್ನು ಚಿಕಿತ್ಸಕ ನೋಟದೊಂದಿಗೆ ತಿದ್ದಿದ ಸಮಾಜ ಸುಧಾರಕ.
ಸರ್ವಜ್ಞನ ತ್ರಿಪದಿಗಳು ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯ ಕೊಡುಗೆಯಾಗಿದೆ. ತ್ರಿಪದಿಗಳು ಸಾರುವ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ. ಇವುಗಳು ಹಲವು ಭಾಷೆಗಳಿಗೆ ಭಾಷಾಂತರಗೊಂಡಿದ್ದು, ಭಾಷೆ ಮತ್ತು ಗಡಿಗಳ ಎಲ್ಲೆ ಮೀರಿ ಕರ್ನಾಟಕದ ಕೀರ್ತಿಯನ್ನು ಬೆಳಗಿಸಿವೆ.
ಇಂದು ರಾಜ್ಯದೆಲ್ಲಡೆ ಸರ್ವಜ್ಞನ ಜನ್ಮದಿನಾಚರಣೆಯನ್ನು ಆಚರಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಜೆಸಿ ರಸ್ತೆಯ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ವಜ್ಞ ಜಯಂತಿ ಆಚರಣೆ ಹಮ್ಮಿಕೊಂಡಿದೆ.