ಸೀಗೆಹಳ್ಳಿ ಕಸ ಸಮಸ್ಯೆ: ಅಧ್ಯಯನಕ್ಕೆ ತಂಡ
ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಸೀಗೆಹಳ್ಳಿ, ಕನ್ನೇನಹಳ್ಳಿ ಕಸ ಸಂಸ್ಕರಣಾ ಘಟಕಗಳಲ್ಲಿ ಉಂಟಾಗಿರುವ ದುರ್ನಾತ ಅಧ್ಯಯನಕ್ಕೆ ಬಿಬಿಎಂಪಿಯ ಅಧಿಕಾರಿಗಳ ತಂಡ ರಚಿಸಿ ಅಧ್ಯಯನ ವರದಿ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಸೀಗೆಹಳ್ಳಿ, ಕನ್ನೇನಹಳ್ಳಿ ಕಸ ಸಂಸ್ಕರಣಾ ಘಟಕಗಳಲ್ಲಿ ಉಂಟಾಗಿರುವ ದುರ್ನಾತ ಅಧ್ಯಯನಕ್ಕೆ ಬಿಬಿಎಂಪಿಯ ಅಧಿಕಾರಿಗಳ ತಂಡ ರಚಿಸಿ ಅಧ್ಯಯನ ವರದಿ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಶಾಸಕ ಎಸ್.ಟಿ.ಸೋಮಶೇಖರ್, ಮೇಯರ್ ಮಂಜುನಾಥ ರೆಡ್ಡಿ, ಆಡಳಿತ ಪಕ್ಷದ ನಾಯಕ ಸತ್ಯ ನಾರಾಯಣ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಎರಡು ಕಸ ಸಂಸ್ಕರಣಾ ಘಟಕಗಳಲ್ಲಿ ದುರ್ನಾತ ಬರುತ್ತಿರುವುದನ್ನು ವಿರೋಧಿಸಿ ಸ್ಥಳೀಯ ಗ್ರಾಮಸ್ಥರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಸಚಿವ ಜಾರ್ಜ್ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ಶಾಸಕ ಸೋಮಶೇಖರ್ ಅವರು, ಕನ್ನೇನಹಳ್ಳಿ ಹಾಗೂ ಸೀಗೆಹಳ್ಳಿಯಲ್ಲಿ ಬಿಬಿಎಂಪಿ ಸ್ಥಾಪಿಸಿರುವ ಕಸ ಸಂಸ್ಕರಣಾ ಘಟಕಗಳಿಂದ ದುರ್ವಾಸನೆ ಬರುತ್ತಿದೆ. ಇದರಿಂದ ಸುತ್ತಮುತ್ತಲ ಗ್ರಾಮಗಳ ಜನ ಅನೇಕ ಸಮಸ್ಯೆ ಎದುರಿಸುತ್ತಿದ್ದಾರೆ. ವಾಸನೆ ಬರುವುದನ್ನು ತಡೆಯಬೇಕು ಇಲ್ಲವೇ ಕಸದ ಘಟಕಗಳನ್ನು ಮುಚ್ಚಬೇಕೆಂದು ಆಗ್ರಹಿಸಿದರು.
ವೈಜ್ಞಾನಿಕವಾಗಿ ಕಸ ಸಂಸ್ಕರಣೆ ಮಾಡಲಾಗುವುದೆಂದು ಬಿಬಿಎಂಪಿ ಅಧಿಕಾರಿಗಳು ಹೇಳುತ್ತಿದ್ದರೂ ಕಸದ ನಿರ್ವಹಣೆ ಸರಿಯಾಗುತ್ತಿಲ್ಲ. ನಿತ್ಯ 250 ರಿಂದ 300 ಲಾರಿಗಳು ಬಂದು ಕಸ ಸುರಿಯುತ್ತಿವೆ ಎಂದು ಸರ್ಕಾರಕ್ಕೆ ಶಾಸಕರು ಮನವರಿಕೆ ಮಾಡಿಕೊಟ್ಟಾಗ ಅಧಿಕಾರಿಗಳ ತಂಡ ರಚಿಸಲಾಗುವುದು, ಆ ತಂಡ ಸ್ಥಳಕ್ಕೆ ಭೇಟಿ ನೀಡಿ ಅಧ್ಯಯನ ಮಾಡಿ ವರದಿ ಸಲ್ಲಿಸಲಿ, ಅದರ ಆಧಾರದ ಮೇಲೆ ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.