ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರೋಧಧ ನಡುವೆಯೂ ತಮ್ಮ ಮೊಮ್ಮಗನಿಗೆ ಹೆಬ್ಬಾಳ ಕ್ಷೇತ್ರದ ಟಿಕೆಟ್ ಗಿಟ್ಟಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಈಗ ಗೆಲುವಿನ ದಡ ಸೇರಲು ಸರ್ವ ಪರ್ಯತ್ನಗಳಿಗೂ ಕೈ ಹಾಕಿದ್ದಾರೆ.
ಸ್ವಪಕ್ಷೀಯರನ್ನು ಒಲಿಸಿಕೊಳ್ಳುವುದರ ಜತೆಗೆ ಮಾಜಿ ಪ್ರಧಾನಿ ದೇವೇಗೌಡರ ಬೆಂಬಲ ಗಿಟ್ಟಿಸುವ ಪ್ರಯತ್ನ ಮುಂದುವರೆಸಿದ್ದಾರೆ.
ಹೆಬ್ಬಾಳ ಕ್ಷೇತ್ರದಲ್ಲಿ ತಮ್ಮ ಮೊಮ್ಮಗ, ಕಾಂಗ್ರೆಸ್ ಅಭ್ಯರ್ಥಿ ರೆಹಮಾನ್ ಷರೀಫ್ ಗೆಲ್ಲಲೇಬೇಕಾಗಿರುವ ಸವಾಲು ಎದುರಿಸುತ್ತಿರುವ ಕೇಂದ್ರ ಮಾಜಿ ಸಚಿವ ಜಾಫರ್ ಷರೀಫ್ ಅವರು ಗುರುವಾರ ದೇವೇಗೌಡರನ್ನು ಭೇಟಿಯಾಗಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎನ್ನಲಾಗಿದೆ.
ಹೆಬ್ಬಾಳ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು, ಒಕ್ಕಲಿಗರ ಮತಗಳೇ ನಿರ್ಣಾಯಕವಾಗಿದ್ದು ಜೆಡಿಎಸ್ ನಿಂದಲೂ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿ ಸ್ಪರ್ಥಿಸಿರುವುದರಿಂದ ಅಲ್ಪಸಂಖ್ಯಾತ ಮತಗಳು ವಿಭಜನೆಯಾಗಿ ಬಿಜೆಪಿಗೆ ಲಾಭವಾಗಬಹುದೆಂಬ ಆತಂಕ ಕಾಡುತ್ತಿದೆ. ಈ ನಿಟ್ಟಿನಲ್ಲಿ ದೇವೇಗೌಡರ ಮನವೊಲಿಸಿ ಜೆಡಿಎಸ್ ಅಭ್ಯರ್ಥಿಯನ್ನು ಕಣದಿಂದ ಹಿಂಪಡೆಯುವಂತೆ ಮಾಡುವ ನಿಟ್ಟಿನಲ್ಲಿ ತಮ್ಮ ಪ್ರಯತ್ನಗಳನ್ನು ಮುಂದುವರಿಸಿರುವ ಷರೀಫ್, ಗುರುವಾರ ದಿನವಿಡೀ ದೇವೇಗೌಡರ ಸಂಪರ್ಕ ಸಾಧಿಸಲು ಪ್ರಯತ್ನಿಸಿದ್ದರೂ ಯಶಸ್ವಿಯಾಗಿಲ್ಲ.