ಬಿಎಸ್ಆರ್ ಕಾಂಗ್ರೆಸ್ ಅಭ್ಯರ್ಥಿಯಿಂದ ಪ್ರಚಾರಕ್ಕೆ ಚಾಲನೆ
ಕ.ಪ್ರ. ವಾರ್ತೆ , ರಾಮನಗರ , ಏ.21
ರಾಮನಗರ ವಿಧಾನಸಭಾ ಕ್ಷೇತ್ರದ ಬಿಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ ತೀರ್ಥಪ್ರಸಾದ ನಗರದ ಚಾಮುಂಡೇಶ್ವರಿ ದೇವಾಲಯ ಮತ್ತು ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.
ನಗರದ ಎಂಜಿ ರಸ್ತೆ, ಛತ್ರದ ಬೀದಿ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಬೆಂಬಲಿಗರೊಂದಿಗೆ ಮನೆಮನೆಗೆ ತೆರಳಿ ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷರಾಗಿರುವ ಮಾಜಿ ಸಚಿವ ಶ್ರೀರಾಮುಲು ಅವರು ಆರೋಗ್ಯ ಸಚಿವರಾಗಿ, ದೀನ-ದಲಿತರ ಉದ್ಧಾರಕ್ಕಾಗಿ ಶ್ರಮಿಸಿದ್ದಾರೆ. ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ಕೆಳವರ್ಗದ ಜನತೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಇದೇ ನನಗೆ ಶ್ರೀರಕ್ಷೆಯಾಗಿದ್ದು, ಶ್ರೀರಾಮುಲು ಅವರ ಸಾಧನೆಯನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಮತ ಕೇಳುವುದಾಗಿ ತಿಳಿಸಿದರು. ಮುಖಂಡರಾದ ಸಿಂಗ್ರಯ್ಯ, ಕಾಳಯ್ಯ, ರಾಜು, ರವಿಚಂದ್ರ, ಬೋರಪ್ಪ, ನರೇಶ್ ಮತ್ತಿತರರು ಹಾಜರಿದ್ದರು.