ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಹಗರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ

Vishwanath S
Updated On : 29 Apr 2013, 1:06 am

ಕ.ಪ್ರ.ವಾರ್ತೆ  ,   ರಾಮನಗರ   ,    ಏ.28
ಮಾಗಡಿಯ ಲೋಕೋಪಯೋಗಿ ಉಪವಿಭಾಗದಲ್ಲಿ ನಡೆದಿರುವ ಹಗರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಅವ್ಯವಹಾರದಲ್ಲಿ ಒಂದೇ ಒಂದು ರು. ನನ್ನ ಪಾಲಿದೆ ಎನ್ನುವುದನ್ನು ಸಾಬೀತುಪಡಿಸಿದರೆ ರಾಜಕೀಯದಿಂದಲೇ ನಿವೃತ್ತಿಯಾಗುವೆ ಎಂದು ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಎಚ್.ಸಿ. ಬಾಲಕೃಷ್ಣ ಎದುರಾಳಿಗಳಿಗೆ ತಿರುಗೇಟು ನೀಡಿದ್ದಾರೆ.
ಅಧಿಕಾರಿಗಳು, ಗುತ್ತಿಗೆದಾರರು ಅವ್ಯವಹಾರ ನಡೆಸಿದ್ದರೆ ಅದರ ಫಲ ಉಣ್ಣುತ್ತಾರೆ. ಹಗರಣವನ್ನು ನನ್ನ ತಲೆಗೆ ಕಟ್ಟುವ ಪ್ರಯತ್ನ ಕೇವಲ ರಾಜಕೀಯ ದುರುದ್ದೇಶದಿಂದ ಕೂಡಿದ್ದಷ್ಟೇ ಎಂದು ಕೂಟಗಲ್ ಹೋಬಳಿಯ ಅರೇಹಳ್ಳಿ ಮತ್ತು ವಿವಿಧೆಡೆ ಚುನಾವಣಾ ಪ್ರಚಾರ ಭಾಷಣದಲ್ಲಿ ಅವರು ಪ್ರಸ್ತಾಪಿಸಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಹಲವಾರು ಜನಪರ ಕಾರ್ಯಕ್ರಮಗಳನ್ನು ನೀಡಿದ್ದಾರೆ. ರಾಜ್ಯದ ಮತ್ತು ಜಿಲ್ಲೆಯ ಅಭಿವೃದ್ಧಿಗಾಗಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡಲು ಜೆಡಿಎಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಬೇಕು ಎಂದು ಅವರು ಮನವಿ ಮಾಡಿದರು.
ತಾಲೂಕು ಕೇಂದ್ರವಾಗಿದ್ದ ರಾಮನಗರವನ್ನು ಜಿಲ್ಲೆಯನ್ನಾಗಿ ಘೋಷಿಸಿ, ಸಮಗ್ರ ಅಭಿವೃದ್ಧಿಗಾಗಿ ರು.1600 ಕೋಟಿ ಬಿಡುಗಡೆ ಮಾಡಲಾಯಿತು. ಇದಕ್ಕೂ ಮುನ್ನ ಅಧಿಕಾರದಲ್ಲಿದ್ದ ಕಾಂಗ್ರೆಸ್ ಶಾಸಕರು ಅಭಿವೃದ್ಧಿಗೆ ನೀಡಿದ ಕೊಡುಗೆ ಶೂನ್ಯ ಎಂದರು.
ಸತ್ಯಕ್ಕೆ ದೂರ: ಬಿಡದಿ ಮತ್ತು ಕೂಟಗಲ್ ಹೋಬಳಿಗಳನ್ನು ನಾನು ಕಡೆಗಣಿಸಿದ್ದೇನೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.
 ಇದು ಸತ್ಯಕ್ಕೆ ದೂರವಾದುದು. ನನ್ನ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆದಿದ್ದು, ಜನರಿಂದ ಅಭೂತಪೂರ್ವ ಬೆಂಬಲ ದೊರೆತಿದೆ. ಇದರಿಂದ ಹತಾಶರಾಗಿರುವ ಅವರು ಆರೋಪ ಮಾಡುವುದರಲ್ಲಿ ತೊಡಗಿದ್ದಾರೆ ಎಂದರು.
ಸವಾಲು: ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಏನೂ ಇಲ್ಲ. ಅಭಿವೃದ್ಧಿಯಾಗಿದ್ದರೆ ಜೆಡಿಎಸ್‌ನ ಅಧಿಕಾರಾವಧಿಯಲ್ಲಿ ಮಾತ್ರ. ಈ ಸಂಬಂಧ ಕಾಂಗ್ರೆಸ್ ಮುಖಂಡರು ಬಹಿರಂಗೆ ಚರ್ಚೆಗೆ ಬರಲಿ. ನಾವು ಮಾಡಿರುವ ಅಭಿವೃದ್ಧಿಯಲ್ಲಿ ಕೇವಲ ಅರ್ಧದಷ್ಟನ್ನು ಕಾಂಗ್ರೆಸ್‌ನವರು ಮಾಡಿದ್ದರೆ, ಅವರಿಗೆ ಹಾರ ಹಾಕಿ, ಅವರನ್ನೇ ಬೆಂಬಲಿಸುತ್ತೇನೆ ಎಂದು ಸವಾಲು ಹಾಕಿದರು.
ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಅವರು ಕ್ಷೇತ್ರಕ್ಕೆ ಬಂದ ಮೇಲೆ ಮಾಜಿ ಶಾಸಕರು ಪಲಾಯನ ಮಾಡಿದ್ದಾರೆ. ರಿಯಲ್ ಎಸ್ಟೇಟ್ ದಂಧೆಯಲ್ಲಿ ತೊಡಗಿ ಅಕ್ರಮ ಹಣ ಗಳಿಸಿರುವವರಿಗೆ ಟಿಕೆಟ್ ಕೊಡಿಸುವ ಮೂಲಕ ಅವರನ್ನು ಹರಕೆಯ ಕುರಿಯನ್ನಾಗಿಸಲು ಹೊರಟಿದ್ದಾರೆ ಎಂದು ಪರೋಕ್ಷವಾಗಿ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಅವರ ವಿರುದ್ಧ ಹರಿಹಾಯ್ದರು.
ಕಾಂಗ್ರೆಸ್ 3ನೇ ಸ್ಥಾನದಲ್ಲಿ: ಮಾಗಡಿ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಕೆಜೆಪಿ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದ್ದು, ಕಾಂಗ್ರೆಸ್ ಮೂರನೇ ಸ್ಥಾನದಲ್ಲಿದೆ. ಮುಗ್ಧ ರೈತರನ್ನು ವಂಚಿಸಿ, ವಂಚನೆ ಪ್ರಕರಣಗಳನ್ನು ಎದುರಿಸುತ್ತಿರುವವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಈ ಚುನಾವಣೆಯಲ್ಲಿ ಜನರೇ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.  ರಾಜ್ಯಾದ್ಯಂತ ಪಕ್ಷದ ಪರ ಜನಾಭಿಪ್ರಾಯ ವ್ಯಕ್ತವಾಗಿದ್ದು, ಈ ಬಾರಿ ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ ರೈತರ ಸಾಲ ಮನ್ನಾ ಮಾಡಲಾಗುವುದು. ರಾಜ್ಯದ ಹಾಗೂ ಜಿಲ್ಲೆಯ ಅಭಿವೃದ್ಧಿಗಾಗಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಶಕ್ತಿ ತುಂಬಲು ಜೆಡಿಎಸ್ ಅಭ್ಯರ್ಥಿಗಳನ್ನು ಆಶೀರ್ವದಿಸಬೇಕು ಎಂದು ಬಾಲಕೃಷ್ಣ ವಿನಂತಿಸಿದರು. ಪ್ರಚಾರದಲ್ಲಿ ಜೆಡಿಎಸ್ ಮುಖಂಡರಾದ ಭಾನುಮತಿ ಬೋರೇಗೌಡ, ಶಿವಪ್ರಸಾದ್, ಸಿದ್ಧಲಿಂಗೇಗೌಡ, ಅಶೋಕ್ ಕುಮಾರ್, ಸುಮಿತ್ರಮ್ಮ, ಅರೇಹಳ್ಳಿ ಮೂರ್ತಿ, ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement