ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕಾಂಗ್ರೆಸ್ ಮಣಿಸಲು ಒಂದಾದ ಬಿಜೆಪಿ, ಜೆಡಿಎಸ್

Srinivasa Murthy VN
Updated On : 2 Aug 2013, 1:34 am

ಕನ್ನಡಪ್ರಭ ವಾರ್ತೆಬೆಂಗಳೂರುಆ.1
ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಆಡಳಿತ ಪಕ್ಷದ ವಿರುದ್ಧ ಒಟ್ಟಾಗಿ ರಣತಂತ್ರ ನಡೆಸಲು ಬಿಜೆಪಿ ಹಾಗೂ ಜೆಡಿಎಸ್ ಸಿದ್ಧತೆ ನಡೆಸಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎದುರಿಸುತ್ತಿರುವ ಮೊದಲ ಚುನಾವಣೆಯಲ್ಲೇ ಕಾಂಗ್ರೆಸ್‌ಗೆ ಸೋಲುಣಿಸಬೇಕೆಂಬ ಉದ್ದೇಶದಿಂದ ಎರಡು ಪ್ರತಿಪಕ್ಷಗಳು ಒಟ್ಟಾಗಿ ಕಾಂಗ್ರೆಸ್ ವಿರುದ್ಧ ಸೆಣೆಸಲು ಮುಂದಾಗಿವೆ.
ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಈ ಹಿಂದೆ ಜೆಡಿಎಸ್ ಜಯಗಳಿಸಿತ್ತು. ಒಕ್ಕಲಿಗರ ಪ್ರಾಬಲ್ಯವಿರುವ ಈ ಎರಡು ಕಡೆಗಳಲ್ಲಿ ಈಗ ಗೆಲುವು ಸಾಧಿಸುವುದು ಜೆಡಿಎಸ್‌ಗೆ ಅನಿವಾರ್ಯವಾಗಿದೆ. ಅದೇ ರೀತಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಮೂರು ಸ್ಥಾನಗಳಲ್ಲಿ ಹಿಂದೆ ಬಿಜೆಪಿ ಜಯಗಳಿಸಿದೆ. ಇದನ್ನು ತನ್ನ ವಶದಲ್ಲೇ ಇಟ್ಟುಕೊಳ್ಳಲು ಬಿಜೆಪಿ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಉಭಯ ಪಕ್ಷಗಳು ಒಳ ಒಪ್ಪಂದಕ್ಕೆ ಮುಂದಾಗಿದ್ದು, ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್‌ನ್ನು ಬೆಂಬಲಿಸಲಿದ್ದು, ಇದಕ್ಕೆ ಪ್ರತಿಯಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್ ಸಹಕಾರ ನೀಡಲಿದೆ. ಈ ಮೂಲಕ ಎರಡು ಕಡೆ ಆಡಳಿತ ಪಕ್ಷಕ್ಕೆ ಮುಖಭಂಗ ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಉದ್ದೇಶ.
ಈ ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೇ ಇರಲು ಬಿಜೆಪಿ ಮುಂದಾಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ಚಿನ ಸ್ಪರ್ಧೆ ನೀಡದ ತುಳಸಿ ಮುನಿರಾಜು ಅವರಿಗೆ ಟಿಕೆಟ್ ನೀಡಲು ನಿರ್ಧರಿಸಿದೆ. ಈ ಪ್ರಯತ್ನಕ್ಕೆ ಬಿಜೆಪಿ ಹೈಕಮಾಂಡ್ ಪರೋಕ್ಷ ಒಪ್ಪಿಗೆ ನೀಡಿದ್ದು, ಶುಕ್ರವಾರ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಪರಮೇಶ್ವರ ಕಿಡಿ:  ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ನ ಮೂರು ಸ್ಥಾನಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವಿರುದ್ಧವಾಗಿ ಬಿಜೆಪಿ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿಗೆ ಮುಂದಾಗಿದ್ದು, ಮತದಾರರು ಎರಡು ಪಕ್ಷಗಳಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.
ಈ ಚುನಾವಣೆಯಲ್ಲಿ ಬಿಜೆಪಿ ಜತೆ ಅಪವಿತ್ರ ಮೈತ್ರಿ ಮಾಡಿಕೊಂಡು ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಜೆಡಿಎಸ್ ಮುಂದಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದರಿಂದ ಜೆಡಿಎಸ್‌ನ ಸೋಗಲಾಡಿತನ ಬಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿದ್ದವು. ಆದರೆ ರಾಜ್ಯದ ಪ್ರಜ್ಞಾವಂತ ಮತದಾರ ತಕ್ಕಪಾಠ ಕಲಿಸಿದ್ದ. ಈ ಬಾರಿಯೂ ಎರಡು ಪಕ್ಷಗಳನ್ನು ಮತದಾರ ಶಿಕ್ಷಿಸಲಿದ್ದಾನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement