ಹೋರಾಟಕ್ಕೆ ಜಾಲಪ್ಪ ಬೆಂಬಲ
ಕ.ಪ್ರ.ವಾರ್ತೆ ದೊಡ್ಡಬಳ್ಳಾಪುರ ಆ. 1
ದೊಡ್ಡಬಳ್ಳಾಪುರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೇಂದ್ರವನ್ನಾಗಿ ಘೋಷಿಸಬೇಕು ಎಂಬ ಒತ್ತಾಯ ಚಳವಳಿ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಕೇಂದ್ರ ಸಚಿವ ಆರ್.ಎಲ್. ಜಾಲಪ್ಪ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.
ಗುರುವಾರ ದೊಡ್ಡಬಳ್ಳಾಪುರ ಶಾಸಕ ಟಿ. ವೆಂಕಟರಮಣಯ್ಯ ಮತ್ತು ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಮುಖಂಡರ ನೇತೃತ್ವದಲ್ಲಿ ಭೇಟಿಯಾದ ವಿವಿಧ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಮಾತನಾಡಿದ ಅವರು ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರವಾಗಬೇಕು ಎಂಬ ಹೋರಾಟ ನ್ಯಾಯಯುತವಾಗಿದೆ. ವಸ್ತುಸ್ಥಿತಿಯನ್ನು ಪರಿಶೀಲಿಸಿ, ಪೂರಕ ಅಂಕಿ-ಅಂಶಗಳಿಗೆ ಒತ್ತು ನೀಡಿ ಬೇಡಿಕೆಯನ್ನು ಈಡೇರಿಸಬೇಕು. ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಈ ಕುರಿತು ಸಿಎಂ ಸಿದ್ಧರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಲಾಗುವುದು. ಇಲ್ಲಿನ ಜನರ ಒಕ್ಕೊರಲ ಬೇಡಿಕೆಯನ್ನು ಸಿಎಂಗೆ ಮನವರಿಕೆ ಮಾಡಿಕೊಡುವುದಾಗಿ ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟಿ. ವೆಂಕಟರಮಣಯ್ಯ, ಹೋರಾಟಕ್ಕೆ ಜಾಲಪ್ಪ ಅವರಂತಹ ಹಿರಿಯ ರಾಜಕಾರಣಿಗಳ ಬೆಂಬಲ ಲಭ್ಯವಾಗಿರುವುದು ಗಣನೀಯ. ಮುಂದಿನ ಹಂತದ ಹೋರಾಟಗಳ ಕುರಿತು ಹೋರಾಟ ಸಮಿತಿ ನಿರ್ಧಾರ ಕೈಗೊಳ್ಳಬೇಕು. ಸರ್ಕಾರದ ಮೇಲೆ ಈ ಬಗ್ಗೆ ಒತ್ತಡ ಹೇರಲಾಗುವುದು ಎಂದರು. ಜಿಲ್ಲಾ ಹೋರಾಟ ಸಮಿತಿ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದರು.