ಮಾಲೂರಲ್ಲಿ ಕಲ್ಲು ಗಣಿ ಮಾಲಿನ್ಯ: ನೋಟಿಸ್
ಬೆಂಗಳೂರು: ಕೋಲಾರ ಜಿಲ್ಲೆ ಮಾಲೂರಿನಲ್ಲಿ ಹೆಚ್ಚಿರುವ ಕಲ್ಲು ಗಣಿಗಾರಿಕೆಯಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರ, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಮಂಜುನಾಥ್. ಆರ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಕೆ.ಎಲ್.ಮಂಜುನಾಥ್ ಹಾಗೂ ನ್ಯಾ.ರವಿಮಳಿಮಠ್ ಅವರಿದ್ದ ವಿಭಾಗೀಯ ಪೀಠ, ವಿಚಾರಣೆಯನ್ನು ಮುಂದೂಡಿದೆ. ಮಾಲೂರಿನಲ್ಲಿ 36ಕ್ಕೂ ಹೆಚ್ಚು ಕಲ್ಲು ಗಣಿಗಾರಿಕೆ ಯಂತ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಪರಿಸರಕ್ಕೆ ತೀವ್ರ ಹಾನಿ ಉಂಟಾಗುತ್ತಿದೆ. ಈ ಸಂಬಂಧ ಮಾಹಿತಿ ಹಕ್ಕು ಕಾಯ್ದೆಯಿಂದ ದೊರೆತಿರುವ ಮಾಹಿತಿ ಪ್ರಕಾರ, ಇದರಲ್ಲಿ ಅನೇಕ ಗಣಿ ಸಂಸ್ಥೆಗಳ ಪರವಾನಗಿ ರದ್ದಾಗಿದೆ. ಆದರೂ, ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಇದನ್ನು ತಡೆಯಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಸಚಿವ ದಿನೇಶ್ಗೆ ನೋಟಿಸ್: ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಆಹಾರ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಿ. ನಾಗರಾಜ್ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ಎಸ್. ಪಾಟೀಲ್ ಅವರಿದ್ದ ಏಕಸದಸ್ಯ ಪೀಠ, 3 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಿದೆ.