ಸರಳ ಸ್ವಾತಂತ್ರ್ಯೋತ್ಸವಕ್ಕೆ ನಿರ್ಧಾರ
ಮಾಗಡಿ: ಆ.15 ರಂದು ಸರಳವಾಗಿ ಸ್ವಾತಂತ್ರ್ಯ ದಿನ ಆಚರಿಸಲು ತೀರ್ಮಾನಿಸಲಾಗಿದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರೂ ಆಗಿರುವ ತಹಸೀಲ್ದಾರ್ ಡಾ.ಬಿ.ಆರ್. ಹರೀಶ್ ನಾಯಕ್ ತಿಳಿಸಿದರು. ಅವರು ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದ ಪೂರ್ವ ಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಬೆಂಗಳೂರು ಗ್ರಾಮಾಂತರ ಲೋಕಸಭಾ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಮೇಲಿನಂತೆ ತೀರ್ಮಾನ ಕೈಗೊಳ್ಳಲಾಗಿದೆ. ಆ.15 ರಂದು ಬೆಳಿಗ್ಗೆ 9 ಗಂಟೆಗೆ ಪಟ್ಟಣದ ಐತಿಹಾಸಿಕ ಕೆಂಪೇಗೌಡ ಕೋಟೆ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು. ತಾಲೂಕು ಮಟ್ಟದ ಅಧಿಕಾರಿಗಳು, ಶಾಲಾ ಮಕ್ಕಳಿಂದ ಧ್ವಜ ವಂದನೆ ಸ್ವೀಕಾರ ನಡೆಯಲಿದೆ. ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಲಾಗಿದ್ದು, ಪುರನಾಗರಿಕರು, ಸಾಹಿತಿಗಳು, ಕವಿಗಳು, ವಿವಿಧ ಸಂಘ, ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸಲು ಸಮಿತಿ ರಚಿಸಲಾಗಿದೆ ಎಂದು ಹರೀಶ್ ನಾಯಕ್ ತಿಳಿಸಿದರು.