ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ನಾಗರಿಕರಿಗೆ ಆತ್ಮರಕ್ಷಣೆ ತಿಳಿಸಿಕೊಡುವ ಸದುದ್ದೇಶ

Rashmi Kasaragodu
Updated On : 12 Aug 2013, 12:47 pm

ಕ.ಪ್ರ.ವಾರ್ತೆ ರಾಮನಗರ ಆ.11
ಜಿಲ್ಲಾ ಪೊಲೀಸ್ ಇಲಾಖೆಯು ಸಾರ್ವಜನಿಕರಿಗಾಗಿ ಆ.5ರಿಂದ 11ರವರೆಗೆ ಹಮ್ಮಿಕೊಂಡಿದ್ದ ನಾಗರಿಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಜಿಲ್ಲಾ ಪೊಲೀಸ್ ಭವನದಲ್ಲಿ ಭಾನುವಾರ ನಡೆಯಿತು.
ಶಿಬಿರದಲ್ಲಿ ಪಾಲ್ಗೊಂಡಿದ್ದ 70 ಮಂದಿ ಪ್ರಶಿಕ್ಷಣಾರ್ಥಿಗಳಿಗೆ ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗ್ರವಾಲ್ ತರಬೇತಿ ಪ್ರಮಾಣಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗ್ರವಾಲ್ ಮಾತನಾಡಿ, ನಾಗರಿಕರಲ್ಲಿ ಆತ್ಮರಕ್ಷಣೆ, ಶಿಸ್ತು, ಸಮಯಪಾಲನೆ ಹಾಗೂ ಕಾನೂನು ಪಾಲನೆಯ ಮಹತ್ವವನ್ನು ತಿಳಿಸಿಕೊಡುವ ಸದುದ್ದೇಶದಿಂದ ಈ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.  ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ಇರುವ ಭಯವನ್ನು ಹೋಗಲಾಡಿಸುವುದು ಹಾಗೂ ಪೊಲೀಸ್ ಮತ್ತು ಸಾರ್ವಜನಿಕರಿಗಿರುವ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಪ್ರಥಮ ಬಾರಿಗೆ ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಿದೆ ಎಂದರು.
ತರಬೇತಿ ಹೊಂದಿದ ನಾಗರಿಕರು ಯಾವುದೇ ಕಾರಣಕ್ಕೂ ದುರುಪಯೋಗಪಡಿಸಿಕೊಳ್ಳಬಾರದು. ಸಂದಿಗ್ದ ಪರಿಸ್ಥಿತಿಯಲ್ಲಿ ಆತ್ಮರಕ್ಷಣೆಗೆ ಮಾತ್ರ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮಹಿಳೆಯರಿಗೂ ಕೂಡ ತರಬೇತಿ ನೀಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ತರಬೇತಿ ಶಿಬಿರದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಅನುಪಮ್ ಅಗ್ರವಾಲ್ ಕರೆ ನೀಡಿದರು.
ಪ್ರಕೃತಿ ವಿಕೋಪ ಹಾಗೂ ಇನ್ನಿತರೆ ತುರ್ತು ಸಂದರ್ಭಗಳಲ್ಲಿ ತರಬೇತಿ ಪಡೆದ ನಾಗರಿಕರನ್ನು ಪರಿಸ್ಥಿತಿಯನ್ನು ನಿಭಾಯಿಸಲು ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ತಿಳಿಸಿದರು. ತರಬೇತಿ ನೀಡಿದ ಆರ್ಪಿಐ ಗಿರೀಶ್, ಮಲ್ಲಿಕಾರ್ಜುನಪ್ಪ, ಶಿವಶಂಕರ್, ಭರತ್ ಅವರನ್ನು ಇದೇ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಸಿಪಿಐ ಪುರುಷೋತ್ತಮ್, ಪಿಎಸ್ಐಗಳಾದ ಪ್ರವೀಣ್ ಬಾಬು, ಶೋಭಾ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement