ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಜೆಡಿಎಸ್- ಬಿಜೆಪಿ ಅಪವಿತ್ರ ಮೈತ್ರಿ: ನಾರಾಯಣಸ್ವಾಮಿ

Rashmi Kasaragodu
Updated On : 15 Aug 2013, 1:03 am

ಕ.ಪ್ರ.ವಾರ್ತೆ   ರಾಮನಗರ   ಆ.14
ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಬಯಲಿಗೆಳೆದು, ಆ ಪಕ್ಷದ ಮುಖಂಡರನ್ನು ಜೈಲಿಗಟ್ಟಿದ್ದೇವೆಂದು ಹಾದಿ ಬೀದಿಯಲ್ಲಿ ಬೀಗುತ್ತಾ ಭಾಷಣ ಮಾಡುತ್ತಿದ್ದವರೇ ಇಂದು ಆ ಪಕ್ಷದೊಟ್ಟಿಗೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಮಂಡಳಿಯ ಪ್ರಯಾಣಿಕರ ಸೌಲಭ್ಯ ಸಮಿತಿ ಅಧ್ಯಕ್ಷ ನಾರಾಯಣ ಸ್ವಾಮಿ ಟೀಕಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಭಾರಿ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದರು.
ರಾಷ್ಟ್ರ ಹಾಗೂ ರಾಜ್ಯದಲ್ಲಿ ಜೆಡಿಎಸ್‌ಗೆ ಭವಿಷ್ಯ ಇಲ್ಲ. ಕೇವಲ ನಾಲ್ಕೈದು ಜಿಲ್ಲೆಗಳಲ್ಲಿ ಮಾತ್ರ ಜೆಡಿಎಸ್ ಅಸ್ತಿತ್ವದಲ್ಲಿದ್ದು, ಜಾತಿ ಹೆಸರಿನಲ್ಲಿ ಕಿಚ್ಚು ಹಚ್ಚುವ ಜತೆಗೆ ಬ್ಲಾಕ್‌ಮೇಲ್ ರಾಜಕಾರಣ ಮಾಡುತ್ತಿದೆ. ಇಂತಹ ಪಕ್ಷವನ್ನು ಮತದಾರರು ಧಿಕ್ಕರಿಸಬೇಕು ಎಂದು ಅವರು ಮನವಿ ಮಾಡಿದರು.
ಜೆಡಿಎಸ್‌ನ ಪಾಪದ ಫಲದಿಂದ ಭ್ರಷ್ಟ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಜೆಡಿಎಸ್ ವರಿಷ್ಠರು ಪಕ್ಷದ ಇತರ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ತಮ್ಮ ಕುಟುಂಬದ ಅನುಕೂಲಕ್ಕಾಗಿ ಕೋಮುವಾದಿಗಳೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ಇದರಿಂದ ಬೇಸತ್ತಿರುವ ಅನೇಕ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ತಿಳಿಸಿದರು.  
ಜೆಡಿಎಸ್‌ದು ಡೋಂಗಿ ಜಾತ್ಯತೀತವಾದ. ದಲಿತ ಜನಾಂಗಕ್ಕೆ ಸೇರಿದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲು ಆ ಪಕ್ಷಕ್ಕೆ ಇಷ್ಟವಿಲ್ಲ. ಮಲ್ಲಿಕಾರ್ಜುನ ಖರ್ಗೆಗೆ ಮುಖ್ಯಮಂತ್ರಿ ಆಗುವ ಅವಕಾಶ ಇತ್ತು. ಆದರೆ, ದೇವೇಗೌಡರು ಹೈಕಮಾಂಡ್ ಮೇಲೆ ಒತ್ತಡ ಹೇರಿ ಧರ್ಮಸಿಂಗ್ ಅವರನ್ನು ಮುಖ್ಯಮಂತ್ರಿ ಮಾಡುವಲ್ಲಿ ಯಶಸ್ವಿಯಾಗಿದ್ದರು ಎಂದು ಆರೋಪಿಸಿದರು.  
ಮುಂದಿನ ದಿನಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಆಗಿರುವ ಜಿ.ಪರಮೇಶ್ವರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ಇದು ಸೂರ್ಯ-ಚಂದ್ರ ಇರುವಷ್ಟೇ ಸತ್ಯ. ಈ ಅವಧಿಯಲ್ಲಿಯೇ ಆಗಬಹುದು ಅಥವಾ ಮುಂದಿನ ಅವಧಿಯಲ್ಲಿಯೇ ಆಗಬಹುದು ಕಾದು ನೋಡಿ ಎಂದು ಸುದ್ದಿಗಾರರ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದರು. ಗೋಷ್‌ಠಿಯಲ್ಲಿ ಜಯರಾಜ್, ಶಿವಕುಮಾರಸ್ವಾಮಿ, ವೆಂಕಟಾಚಲಯ್ಯ, ಡಾ.ನವೀನ್, ರಾಂಪುರ ನಾಗೇಶ್ ಮತ್ತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement